ಹೊಂದಾಣಿಕೆಯಿಂದ ಕೆಲಸ ಮಾಡಿದಾಗ ಜನಸಾಮಾನ್ಯರ ಸಮಸ್ಯೆ ಪರಿಹಾರ ಸಾಧ್ಯ-ಬಾಲಕೃಷ್ಣ ಆಳ್ವ ಕೊಡಾಜೆ
ವಿಟ್ಲ: ಸ್ಥಳೀಯಾಡಳಿತ ಮತ್ತು ಇಲಾಖಾಧಿಕಾರಿಗಳು ಹೊಂದಾಣಿಕೆಯಿಂದ ಕೆಲಸ ಮಾಡಿದಾಗ ಜನಸಾಮಾನ್ಯರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.
ಮಾಣಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇಲಾಖಾಧಿಕಾರಿಗಳು ತಮ್ಮ ಇಲಾಖೆಗಳಿಂದ ಸಿಗುವ ಸವಲತ್ತು ಮತ್ತು ಸೇವೆಗಳ ಬಗ್ಗೆ ಸರಿಯಾಗಿ ತಿಳಿದುಕೊಂಡು ಗ್ರಾಮೀಣ ಭಾಗದ ಜನರಿಗೆ ತಲುಪಿಸುವಂತಹ ಕಾರ್ಯವನ್ನು ಪ್ರಾಮಾಣಿಕತೆಯಿಂದ ಮಾಡಬೇಕು ಎಂದು ಅವರು ತಿಳಿಸಿದರು. ಗ್ರಾಮೀಣ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳ ಮಾಹಿತಿಯನ್ನು ಸಭೆಯಲ್ಲಿ ನೀಡಿದರು.
ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರಾದ ಇಬ್ರಾಹಿಂ.ಕೆ.ಮಾಣಿ, ಸುದೀಪ್ ಕುಮಾರ್ ಶೆಟ್ಟಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ನಾರಾಯಣ ಶೆಟ್ಟಿ, ರಮಣಿ. ಡಿ.ಪೂಜಾರಿ, ಸೀತಾ, ಸುಜಾತಾ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ ಸ್ವಾಗತಿಸಿ, ವಂದಿಸಿದರು. ಪಂಚಾಯತ್ ಸಿಬ್ಬಂದಿ ಸಹಕರಿಸಿದರು.