ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಸಂಪ್ಯ ಹಾಗೂ ಆರೋಗ್ಯ ರಕ್ಷಾ ಸಮಿತಿ ಸಂಪ್ಯ ಇದರ ಆಶ್ರಯದಲ್ಲಿ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಪ್ರತಿ ತಿಂಗಳು ನಡೆಯುವ ಉಚಿತ ವೈದ್ಯಕೀಯ ಶಿಬಿರದ 17ನೇ ತಿಂಗಳ ವೈದ್ಯಕೀಯ ಶಿಬಿರವು ಆ.6ರಂದು ನೆರವೇರಿತು.
ಶಿಬಿರವನ್ನು ಉದ್ಯಮಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿರುವ ಜಯ ಕುಮಾರ್ ನಾಯರ್ ಹಾಗೂ ಸುನೀತಾ ಜೆ.ನಾಯರ್ ದಂಪತಿ ದೀಪಬೆಳಗಿಸಿ ಉದ್ಘಾಟಿಸಿದರು.
ಮುಖ್ಯ ಅತಿಥಿಯಾಗಿದ್ದ ಹಿಂದೂ ಜಾಗರಣಾ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ಪ್ರಮುಖ್ ಗಣರಾಜ ಭಟ್ ಕೆದಿಲ ಮಾತನಾಡಿ, ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸುವ ಮೂಲಕ ಸಂಪ್ಯ ದೇವಸ್ಥಾನದಲ್ಲಿ ಗ್ರಾಮದ ಸ್ವಾಸ್ಥ್ಯ ಕಾಪಾಡಲಾಗುತ್ತಿದೆ. ಶಿಬಿರವು ಯಶಸ್ವಿಯಾಗಿ 17 ತಿಂಗಳುಗಳಿಂದ ನಡೆಯುತ್ತಿದ್ದು ಎಲ್ಲರೂ ಅನುಸರಿಸಬೇಕಾಗಿದೆ ಎಂದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ ಅಧ್ಯಕ್ಷತೆ ವಹಿಸಿದ್ದರು. ಸಂಪ್ಯ ನವಚೇತನಾ ಯುವಕ ಮಂಡಲದ ಅಧ್ಯಕ್ಷ ವಿಜಯ ಬಿ.ಎಸ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸನ್ಮಾನ:
ಇತ್ತೀಚೆಗೆ ದಾಂಪತ್ಯ ಜೀವನದ ಬೆಳ್ಳಿಹಬ್ಬವನ್ನು ಆಚರಿಸಿರುವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಜಯ ಕುಮಾರ್ ನಾಯರ್ ಹಾಗೂ ಸುನೀತಾ ಜೆ.ನಾಯರ್ ದಂಪತಿಯನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ತಜ್ಞರಿಂದ ವೈದ್ಯಕೀಯ ತಪಾಸಣೆ, ಕೀಲು ಮತ್ತು ಎಲುಬು ತಪಾಸಣೆ, ಇಎನ್‌ಟಿ, ಆಯುರ್ವೇದ ವೈದ್ಯಕೀಯ ತಪಾಸಣೆ, ಇಸಿಜಿ, ಮಧುಮೇಹ ರಕ್ತಪರೀಕ್ಷೆ ಹಾಗೂ ಉಚಿತ ಔಷಧಿಗಳನ್ನು ವಿತರಿಸಲಾಗುವುದು.
ತಜ್ಞ ವೈದ್ಯರಾದ ಡಾ.ಸುರೇಶ್ ಪುತ್ತೂರಾಯ, ಕೀಲು ಮತ್ತು ಎಲುಬು ತಜ್ಞ ವೈದ್ಯಡಾ. ಸಚಿನ್ ಶಂಕರ್ ಹಾರಕೆರೆ, ಇಎನ್‌ಟಿ ತಜ್ಞೆ ಡಾ. ಅರ್ಚನಾ, ಆಯುರ್ವೇದ ತಜ್ಞ ವೈದ್ಯರಾದ ಡಾ. ವೇಣು ಗೋಪಾಲ್ ಹಾಗೂ ಡಾ. ಸಾಯಿ ಪ್ರಕಾಶ್ ಶಿಬಿರದಲ್ಲಿ ತಜ್ಞ ವೈದ್ಯರುಗಳಾಗಿ ಸಹಕರಿಸಿದರು.
ವ್ಯವಸ್ಥಾಪನಾ ಸಮಿತಿ ಸದಸ್ಯೆ ಶಶಿಕಲಾ ನಿರಂಜನ ರೈ ಪ್ರಾರ್ಥಿಸಿದರು. ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಸ್ವಾಗತಿಸಿದರು. ಗೌರವಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ವಂದಿಸಿದರು. ಉಮೇಶ್ ಎಸ್.ಕೆ ಕಾರ್ಯಕ್ರಮ ನಿರೂಪಿಸಿದರು.
ಒಟ್ಟು 210 ಮಂದಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಂಡರು. ಶಿಬಿರದಲ್ಲಿ ಉಚಿತ ಚಿಕಿತ್ಸೆ, ತಪಾಸಣೆ, ಉಚಿತ ಔಷಧಿ ವಿತರಣೆಯ ಜೊತೆಗೆ ಬೆಳಗ್ಗಿನ ಉಪಾಹಾರ ಹಾಗೂ ಮಧ್ಯಾಹ್ನದ ಭೋಜನವನ್ನು ಒದಗಿಸಲಾಗಿತ್ತು. ನವಚೇತನ ಯುವಕ ಮಂಡಲ ಸಂಪ್ಯ, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮುಕ್ರಂಪಾಡಿ, ಪುತ್ತಿಲ ಪರಿವಾರ ಆರ್ಯಾಪು ಘಟಕ, ಐಕ್ಯ ಕಲಾ ಸೇವಾ ಟ್ರಸ್ಟ್ ಮೊಟ್ಟೆತ್ತಡ್ಕ, ಐಡಿಯಲ್ ಲ್ಯಾಬೊರೇಟರಿ ಪುತ್ತೂರು, ಮಹಾವೀರ ಆಸ್ಪತ್ರೆ ಪುತ್ತೂರು, ಭಾರತೀಯ ಜನೌಷಧಿ ಕೇಂದ್ರಗಳು ಪುತ್ತೂರು, ಉಷಾ ಸ್ಕ್ಯಾನ್ ಸೆಂಟರ್ ದರ್ಬೆ, ಪುತ್ತೂರು ಡಯಾಗ್ನೋಸ್ಟಿಕ್ ಮತ್ತು ರಿಸರ್ಚ್ ಸೆಂಟರ್ ತೆಂಕಿಲ, ಹಾಗೂ ಹಲವು ಔಷಧಿ ಕಂಪೆನಿಗಳು, ದೇವಸ್ಥಾನದ ಭಕ್ತಾದಿಗಳು ಶಿಬಿರದಲ್ಲಿ ಸಹಕರಿಸಿದ್ದರು.