ಕ್ಷೇತ್ರದ ಅಭಿವೃದ್ದಿ ವಿಚಾರ-ಮುಖ್ಯಮಂತ್ರಿಗಳ ಜೊತೆ ಶಾಸಕರ ಮಾತುಕತೆ:ಮೆಡಿಕಲ್‌ಕಾಲೇಜು, ಎಸ್ಪಿಕಚೇರಿ ಸ್ಥಳಾಂತರ, ಶ್ರೀ ಮಹಾಲಿಂಗೇಶ್ವರ ದೇವಳದ ಜೀರ್ಣೋದ್ದಾರ ವಿಚಾರ ಪ್ರಸ್ತಾಪ

0


ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈಯವರು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಜೊತೆ ಮಾತುಕತೆ ನಡೆಸಿ ಪುತ್ತೂರು ಕ್ಷೇತ್ರದ ಅಭಿವೃದ್ದಿಗೆ ಸಂಬಂದಿಸಿದಂತೆ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಿದ್ದಾರೆ.

ಪ್ರಮುಖವಾಗಿ ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡಿಸುವ ಮೂಲಕ ಪುತ್ತೂರಿನ ಜನತೆಯ ಬಹುಕಾಲದ ಬೇಡಿಕೆಗೆ ಸ್ಪಂದಿಸಿ ಕಾಲೇಜು ಮಂಜೂರು ಮಾಡುವಂತೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿಕೊಂಡರು. ಮಂಗಳೂರಿನಲ್ಲಿರುವ ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವ ಬಗ್ಗೆ ಕೆಲವೊಂದು ಪ್ರಕ್ರಿಯೆಗಳು ಪೂರ್ಣಗೊಂಡಿದ್ದು ಎಸ್ ಪಿ ಕಚೇರಿಯನ್ನು ಶೀಘ್ರವೇ ಪುತ್ತೂರಿಗೆ ಸ್ಥಳಾಂತರ ಮಾಡುವ ಬಗ್ಗೆ ವಿನಂತಿಸಿಕೊಂಡಿದ್ದಾರೆ.

ಪುತ್ತೂರು ಕ್ಷೇತ್ರದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಈಗಾಗಲೇ ಅರ್ಧದಷ್ಟು ಅನುದಾನ ಮಂಜೂರಾಗಿದ್ದು ಯೋಜನೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸುವ ಮೂಲಕ ಕ್ಷೇತ್ರದ ಜನತೆಯ ಕುಡಿಯುವ ನೀರಿನ ಬೇಡಿಕೆಯನ್ನು ಈಡೇರಿಸುವಂತೆ ಮನವಿ ಮಾಡಲಾಗಿದೆ. ಕೊಯಿಲ ಪಶು ಸಂಗೋಪನಾ ಇಲಾಖೆಯಲ್ಲಿ ಖಾಸಗಿಯವರಿಗೆ ಉದ್ಯಮಕ್ಕೆ ಅವಕಾಶ ನೀಡುವ ಕುರಿತು ಈಗಾಗಲೇ ಸರಕಾರಕ್ಕೆ ಸಚಿವರ ಮೂಲಕ ಮನವಿ ಸಲ್ಲಿಸಲಾಗಿದ್ದು ಈ ಯೋಜನೆಗೆ ಅಸ್ತು ನೀಡುವಂತೆ ಕೇಳಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಹೊಸ ಕಟ್ಟಡಕ್ಕೆ 32 ಕೋಟಿ ರೂ ಅನುದಾನ ಬೇಕಾಗಿದ್ದು ಅದನ್ನು ಬಿಡುಗಡೆ ಮಾಡುವಂತೆ ಶಾಸಕರು ಮುಖ್ಯಮಂತ್ರಿಗಳ ಮನವಿ ಮಾಡಿದರು.

ಪುತ್ತೂರು ದೇವಳಕ್ಕೆ 25 ಕೋಟಿ
ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ 25 ಕೋಟಿ ರೂ ಅನುದಾನ ನೀಡುವಂತೆ ಮುಖ್ಯಮಂತ್ರಿಗಳ ಬಳಿ ಶಾಸಕರು ಮನವಿ ಮಾಡಿದರು. ದೇವಳದಲ್ಲಿ ಅನೇಕ ಕಾಮಗಾರಿಗಳು ನಡೆಯಬೇಕಿದ್ದು ಕ್ಷೇತ್ರದ ಒಟ್ಟು ಅಭಿವೃದ್ದಿಗೆ 25 ಕೋಟಿ ಅನುದಾನವನ್ನು ನೀಡುವಂತೆ ಕೇಳಿಕೊಂಡಿದ್ದಾರೆ. ಶಾಸಕರ ಬೇಡಿಕೆಯನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು ಬೇಡಿಕೆ ಈಡೇರಿಸುವ ಭರವಸೆಯನ್ನು ನೀಡಿದ್ದಾರೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ದ ಕ ಜಿಲ್ಲಾ ಉಸ್ತುವಾರಿ ಸಚಿವರಾದದಿನೇಶ್ ಗುಂಡೂರಾವ್, ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್‌ಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here