ನೆಲ್ಯಾಡಿ: ಶಿರಾಡಿ ಗ್ರಾಮ ಪಂಚಾಯಿತಿಯ 2ನೇ ಅವಧಿಗೆ ಅಧ್ಯಕ್ಷರಾಗಿ ಕಾರ್ತಿಕೇಯನ್ ಹಾಗೂ ಉಪಾಧ್ಯಕ್ಷರಾಗಿ ವಿನೀತಾ ತಂಗಚ್ಚನ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಇಬ್ಬರೂ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿದ್ದಾರೆ.
8 ಸದಸ್ಯ ಬಲದ ಶಿರಾಡಿ ಗ್ರಾಮ ಪಂಚಾಯಿತಿಯಲ್ಲಿ 6 ಕಾಂಗ್ರೆಸ್ ಬೆಂಬಲಿತ ಹಾಗೂ 2 ಬಿಜೆಪಿ ಬೆಂಬಲಿತ ಸದಸ್ಯರಿದ್ದಾರೆ. ಹಿಂದುಳಿದ ವರ್ಗ ‘ಎ’ಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಶಿರಾಡಿ 2ನೇ ವಾರ್ಡ್‌ನಿಂದ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಚುನಾಯಿತರಾಗಿದ್ದ ಕಾರ್ತಿಕೇಯನ್‌ರವರು ಮಾತ್ರ ನಾಮಪತ್ರ ಸಲ್ಲಿಸಿದ್ದು ಅವರ ಅವಿರೋಧ ಆಯ್ಕೆ ನಡೆದಿದೆ.
ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಶಿರಾಡಿ 3ನೇ ವಾರ್ಡ್‌ನಿಂದ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಚುನಾಯಿತರಾಗಿದ್ದ ವಿನೀತಾ ತಂಗಚ್ಚನ್ ಹಾಗೂ ಶಿರಾಡಿ 1ನೇ ವಾರ್ಡ್‌ನಿಂದ ಬಿಜೆಪಿ ಬೆಂಬಲಿತ ಸದಸ್ಯರಾಗಿ ಚುನಾಯಿತರಾಗಿದ್ದ ರಾಧಾ ತಂಗಪ್ಪನ್‌ರವರು ನಾಮಪತ್ರ ಸಲ್ಲಿಸಿದ್ದರು. ಬಳಿಕ ರಾಧಾ ತಂಗಪ್ಪನ್‌ರವರು ನಾಮಪತ್ರ ಹಿಂತೆಗೆದುಕೊಂಡಿದ್ದರಿಂದ ಉಪಾಧ್ಯಕ್ಷರಾಗಿ ವಿನೀತಾ ತಂಗಚ್ಚನ್‌ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸದಸ್ಯರಾದ ಎಂ.ಕೆ.ಪೌಲೋಸ್, ಸಣ್ಣಿಜಾನ್, ಲಕ್ಷ್ಮಣ ಗೌಡ, ಸುಮಿತ್ರ, ಕಮಲ ಉಪಸ್ಥಿತರಿದ್ದರು. ಉಪ್ಪಿನಂಗಡಿ ವಲಯಾರಣ್ಯಾಧಿಕಾರಿ ಜಯಪ್ರಕಾಶ್ ಚುನಾವಣಾಧಿಕಾರಿಯಾಗಿದ್ದರು. ಪಿಡಿಒ ಯಶವಂತ ಬೆಳ್ಚಡಾ, ಕಾರ್ಯದರ್ಶಿ ಶಾರದಾ ಸಹಕರಿಸಿದರು.
ಕಾಂಗ್ರೆಸ್ ಮುಖಂಡರಿಂದ ಅಭಿನಂದನೆ:
ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು. ಜಿ.ಪಂ.ಮಾಜಿ ಸದಸ್ಯರಾದ ಸರ್ವೋತ್ತಮ ಗೌಡ, ಪಿ.ಪಿ.ವರ್ಗೀಸ್, ಕಾಂಗ್ರೆಸ್ ಶಿರಾಡಿ ಗ್ರಾಮ ಸಮಿತಿ ಅಧ್ಯಕ್ಷ ದಿವಾಕರ ಗೌಡ, ಶಿರಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಜಿಮ್ಸನ್ ಕೆ.ಜೆ., ನೆಲ್ಯಾಡಿ ಗ್ರಾ.ಪಂ.ಮಾಜಿ ಸದಸ್ಯ ಕೆ.ಪಿ.ಅಬ್ರಹಾಂ., ಗೋಳಿತ್ತೊಟ್ಟು ಗ್ರಾ.ಪಂ.ಮಾಜಿ ಅಧ್ಯಕ್ಷ ಪೂವಪ್ಪ ಕರ್ಕೇರ, ಗುತ್ತಿಗೆದಾರ ಉಮ್ಮರ್ ಕೊಕ್ಕಡ ಮತ್ತಿತರರು ಅಭಿನಂದಿಸಿದರು.
ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಕಾರ್ತಿಕೇಯನ್‌ರವರು ಶಿರಾಡಿ ಗ್ರಾಮದ ಅಡ್ಡಹೊಳೆ ಕಟ್ಟಿಲಾಯಲ್ ನಿವಾಸಿ, ಶಿರಾಡಿ ೨ನೇ ವಾರ್ಡ್‌ನಿಂದ ಮೊದಲ ಬಾರಿಗೆ ಗ್ರಾ.ಪಂ.ಚುನಾವಣೆಗೆ ಸ್ಪರ್ಧಿಸಿ ಜಯಗಳಿಸಿದ್ದರು. ಕಳೆದ ಅವಧಿಯಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಹಲವು ವರ್ಷ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಕಾರ್ತಿಕೇಯನ್ ಅವರು ಅಲ್ಲಿ ಕಾಂಗ್ರೆಸ್‌ನ ಪ್ರವಾಸಿ ಬೆಂಗಳೂರು ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಶಿರಾಡಿ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಮಾಜಿ ಅಧ್ಯಕ್ಷರಾಗಿದ್ದಾರೆ. ಗುಂಡ್ಯ ಅನುಗ್ರಹ ಮಿಲ್ಕ್ ಪಾರ್ಲರ್‌ನ ಮಾಲಕರಾಗಿದ್ದಾರೆ. ಉಪಾಧ್ಯಕ್ಷರಾಗಿ ಆಯ್ಕೆಗೊಂಡಿರುವ ವಿನೀತಾ ತಂಗಚ್ಚನ್‌ರವರು ಶಿರಾಡಿ ೩ನೇ ವಾರ್ಡ್‌ನಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಸ್ಪರ್ಧಿಸಿ ಜಯಗಳಿಸಿದ್ದರು. ಇವರು ಕಳೆದ ಎರಡೂವರೇ ವರ್ಷ ಗ್ರಾ.ಪಂ.ಅಧ್ಯಕ್ಷೆಯಾಗಿದ್ದರು. ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರ ಸಂಘದ ನಿರ್ದೇಶಕಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.