





ಪುತ್ತೂರು: ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಘಟಕದ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ಗ್ರಾಮ ಪಂಚಾಯತ್ ಕೋಡಿಂಬಾಡಿ ಇವರ ಸಹಕಾರದೊಂದಿಗೆ ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇವರ ಸಂಯೋಜನೆ ಹಾಗೂ ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುದಾಬಿಯವರ ಮಹಾಪೋಷಕತ್ವದಲ್ಲಿ ಗ್ರಾಮ ಸಾಹಿತ್ಯ ಸಂಭ್ರಮದ ಸರಣಿ ಕಾರ್ಯಕ್ರಮ ಆ.26ರಂದು ಕೋಡಿಂಬಾಡಿಯ ಶಾಂತಿನಗರ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟನೆ ನೆರವೇರಿಸಲಿದ್ದಾರೆ. ಕ.ಸಾ.ಪ. ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಅಶೋಕ್ ಪೂಜಾರಿ ಕಾಂತಳಿಕೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋಹಿತಾಶ್ವ, ಸಿ.ಆರ್.ಪಿ. ಮಹಮ್ಮದ್ ಅಶ್ರಫ್ ಮತ್ತು ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರಕಾಶ್ ಗೌಡ ಭಾಗವಹಿಸಲಿದ್ದಾರೆ.
ಹಿರಿಯ ಸಾಹಿತಿ ಕೆ. ರಾಜೇಂದ್ರ ಆರಿಗ ನಿಡ್ಯ, ಪತ್ರಕರ್ತ ಸಂತೋಷ್ ಕುಮಾರ್ ಶಾಂತಿನಗರ, ನಾಟಕ ರಚನೆಕಾರ ವಿಶ್ವನಾಥ್.ಎಚ್. ಬೆಳ್ಳಿಪ್ಪಾಡಿ, ಯಕ್ಷಗಾನ ಕಲಾವಿದ ಜಗನ್ನಾಥ ಶೆಟ್ಟಿ ನಡುಮನೆ, ಸಾಹಿತಿ ಮತ್ತು ಸಂಘಟಕರಾದ ನಿರಂಜನ್ ರೈ ಮಠಂತಬೆಟ್ಟು, ಯುವ ಬರಹಗಾರರಾದ ವೈಶಾಲಿಯವರನ್ನು ಗ್ರಾಮ ಸಾಹಿತ್ಯ ಸಂಭ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅಭಿನಂದಿಸಲಿದ್ದಾರೆ.
ಸಾಹಿತ್ಯ ಮತ್ತು ಶಿಕ್ಷಣಕ್ಕೆ ಕೋಡಿಂಬಾಡಿ ಹಾಗೂ ಬೆಳ್ಳಿಪ್ಪಾಡಿ ಗ್ರಾಮದ ಕೊಡುಗೆ ಎಂಬ ವಿಷಯದಲ್ಲಿ ಬೆಳ್ಳಿಪ್ಪಾಡಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಗುರು ಯಶೋಧ ಉಪನ್ಯಾಸ ನೀಡಲಿದ್ದಾರೆ. ನಂತರ ವಿದ್ಯಾರ್ಥಿಗಳಿಗಾಗಿ ಬಾಲ ಕವಿಗೋಷ್ಠಿ, ಬಾಲಕಥಾಗೋಷ್ಠಿ, ಯುವಕವಿ ಗೋಷ್ಠಿ ನಡೆಯಲಿದೆ. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕ ನಾರಾಯಣ ಕುಂಬ್ರ ತಿಳಿಸಿದ್ದಾರೆ.










