ಗಡಿಗ್ರಾಮದ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಬೇಕಿದೆ: ಶಾಸಕ ಅಶೋಕ್ ರೈ
ಪುತ್ತೂರು; ಸರಕಾರಿ ಶಾಲೆಗಳು ಉಳಿಯಬೇಕಾದರೆ ಪೋಷಕರು ಮುತುವರ್ಜಿವಹಿಸಬೇಕು ಅದರಲ್ಲೂ ಕೇರಳಕ್ಕೆ ತಾಗಿಕೊಂಡಿರುವ ಗಡಿಗ್ರಾಮದ ಶಾಲೆಗಳನ್ನು ಉಳಿಸುವಲ್ಲಿ ನಾವೆಲ್ಲರೂ ಹೆಚ್ಚಿನ ಆಸಕ್ತಿ ತೋರಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.
ಅವರು ನೆಟ್ಟಣಿಗೆ ಮುಡ್ನೂರು ಗ್ರಾಮದ ಗೋಳಿದಡಿ ಸರಕಾರಿ ಹಿ ಪ್ರಾ ಶಾಲೆಯಲ್ಲಿ ವಿವೇಕ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದರು.
ಇಂದು ಸರಕಾರಿ ಶಾಲೆಗಳಲ್ಲಿ ಎಲ್ಲಾ ಸೌಲಭ್ಯಗಳೂ ಇದೆ, ಕೊಠಡಿಗಳ, ಶಿಕ್ಷಕರ ಕೊರತೆಯನ್ನು ನೀಗಿಸಲಾಗಿದೆ. ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪೌಷ್ಠಿಕಾಂಶವಿರುವ ಆಹಾರವನ್ನು ಮಕ್ಕಳಿಗೆ ನೀಡಲಾಗುತ್ತಿದೆ. ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಯನ್ನು ಪ್ರಾರಂಭಿಸುವ ಬಗ್ಗೆಯೂ ಸರಕಾರ ಚಿಂತನೆ ನಡೆಸಿದ್ದು ಈಗಾಗಲೇ ತಾಲೂಕಿಗೆ ಎರಡು ಶಾಲೆಗಳಿಗೆ ಅನುಮತಿಯನ್ನು ನೀಡಿದೆ. ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಕಳುಹಿಸುವ ಮೂಲಕ ಶಾಲೆಯನ್ನು ಉಳಿಸುವ ಕೆಲಸವನ್ನು ಮಾಡಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು.
ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್, ನೆಟ್ಟಣಿಗೆ ಮುಡ್ನೂರು ಗ್ರಾಪಂ ಸದಸ್ಯರಾದ ಶ್ರೀರಾಂ ಪಕ್ಕಳ, ಇಬ್ರಾಹಿಂ, ನೆಟ್ಟಣಿಗೆ ಮುಡ್ನೂರು ಗ್ರಾಪಂ ಅಧ್ಯಕ್ಷೆ ಫೌಝಿಯಾ, ಸೇರಿದಂತೆ ಶಾಲೆಯ ಪೋಷಕರು ಉಪಸ್ಥಿತರಿದ್ದರು.ಶಾಲಾ ಮುಖ್ಯಶಿಕ್ಷಕಿ ವಿದ್ಯಾಕುಮಾರಿ ಸ್ವಾಗತಿಸಿ ವಂದಿಸಿದರು.