ಉಪ್ಪಿನಂಗಡಿ: ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ- 2023 ಸಮೀಕ್ಷೆಯಲ್ಲಿ ಉತ್ತಮ ಕಾರ್ಯನಿರ್ವಹಣೆಗಾಗಿ 34 ನೆಕ್ಕಿಲಾಡಿ ಗ್ರಾ.ಪಂ.ಗೆ ದ.ಕ. ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಲಾಯಿತು.
ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು ಇದರ ನಿರ್ದೇಶಕರು ನಾಗೇಂದ್ರ ಪ್ರಸಾದ್ ಅವರು 34 ನೆಕ್ಕಿಲಾಡಿ ಗ್ರಾ.ಪಂ.ನ ಪಿಡಿಒ ಸತೀಶ್ ಬಂಗೇರ ಡಿ. ಹಾಗೂ ಮಾಜಿ ಅಧ್ಯಕ್ಷ ಪ್ರಶಾಂತ್ ಎನ್. ಅವರಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಿದರು. ಈ ಸಂದರ್ಭ ದ.ಕ. ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ರಘುನಾಥ್ ಎಂ.ಡಿ., ಸ್ವಚ್ಛ ಭಾರತ್ ಮಿಷನ್‌ನ ನೋಡಲ್ ಅಧಿಕಾರಿ ಹಾಗೂ ಉಪಕಾರ್ಯದರ್ಶಿ ರಘು ಎ.ಇ., ಪುತ್ತೂರು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಉಪಸ್ಥಿತರಿದ್ದರು.
ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ಇವರು ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಸ್ವಚ್ಛ ನೈರ್ಮಲ್ಯ ಘಟಕಾಂಶಗಳು, ಓಡಿಎಫ್ ಫ್ಲಸ್ ಸುಸ್ಥಿರತೆಗೊಳಿಸಲು ಹಮ್ಮಿಕೊಂಡಿರುವ ಚಟುವಟಿಕೆಗಳ ಕುರಿತು ಸಮೀಕ್ಷೆ ನಡೆಸಿ, ಉತ್ತಮವಾಗಿ ಕಾರ್ಯನಿರ್ವಹಿಸಿದ ಗ್ರಾಮ ಪಂಚಾಯತ್‌ಗಳಿಗೆ ಜಿಲ್ಲಾ ಮಟ್ಟದಲ್ಲಿ ಈ ಪ್ರಶಸ್ತಿ ನೀಡಲಾಗುತ್ತದೆ.