ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸರಕಾರದ ಚಿಂತನೆ-ಸಿದ್ಧರಾಮಯ್ಯ
ಪುತ್ತೂರು: 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಮತ್ತು ಕಡಬ ತಾಲೂಕು ಸವಣೂರು ಗ್ರಾಮ ಪಂಚಾಯತ್ಗೆ ಅ.3ರಂದು ಪ್ರಶಸ್ತಿ ಪ್ರದಾನ ಮಾಡಲಾಯಿತು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಖಾತೆ ಸಚಿವ ಪ್ರಿಯಾಂಕ ಖರ್ಗೆ ಅವರು ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು. ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ, ಪಿಡಿಒ ವಿಲ್ಫೆಡ್ ಲಾರೆನ್ಸ್ ರೊಡ್ರಿಗಸ್ ಮತ್ತು ಸದಸ್ಯ ಮುಹಮ್ಮದ್ ತೌಸೀಫ್ ಯು.ಟಿ.ಪ್ರಶಸ್ತಿ ಸ್ವೀಕರಿಸಿದರು. ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ ಬಿ.ಎಸ್, ಅಭಿವೃದ್ಧಿ ಅಧಿಕಾರಿ ಸಂದೇಶ್ ಕೆ.ಎನ್., ನಿಕಟ ಪೂರ್ವ ಅಧ್ಯಕ್ಷೆ ರಾಜೀವಿ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿದರು.ಉಪ್ಪಿನಂಗಡಿ, ಸವಣೂರು ಸೇರಿದಂತೆ ರಾಜ್ಯದ 233 ಗ್ರಾಮ ಪಂಚಾಯತ್ಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ ಮಾಡಲಾಯಿತು.4 ಗ್ರಾಮ ಪಂಚಾಯತ್ಗಳಿಗೆ ವಿಶೇಷ ಗಾಂಧಿ ಗ್ರಾಮ ಪುರಸ್ಕಾರ ಹಾಗೂ 15 ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ರಾಜ್ಯ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರದಾನಿಸಿದರು. ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ,ಗ್ರಾಮಗಳ ವ್ಯಾಜ್ಯಗಳು ಗ್ರಾಮಗಳಲ್ಲೇ ಬಗೆಹರಿಯಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಮಹಾತ್ಮಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಗ್ರಾಮ ಸ್ವರಾಜ್ಯ ಮತ್ತು ಅಧಿಕಾರ ವಿಕೇಂದ್ರೀಕರಣ ಆಶಯದಂತೆ ಗ್ರಾಮ ನ್ಯಾಯಾಲಯಗಳ ಸ್ಥಾಪನೆಯಾದರೆ ಗ್ರಾಮಸ್ಥರಿಗೆ ಬಹಳ ಅನುಕೂಲ ಆಗುತ್ತದೆ ಎಂದರು.
ಖಾದಿ-ಗ್ರಾಮೋದ್ಯೋಗ ಸ್ಥಳಗಳನ್ನು ಅಭಿವೃದ್ಧಿಪಡಿಸಲಾಗುವುದು ಮತ್ತು ಗ್ರಾಮೋದ್ಯೋಗ ಉತ್ಪನ್ನಗಳಿಗೆ ಮಾರುಕಟ್ಟೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಮುಖ್ಯಮಂತ್ರಿ, ಅಧಿಕಾರ ವಿಕೇಂದ್ರೀಕರಣ ಗಾಂಧಿಯವರ ಕನಸಾಗಿತ್ತು.ಇದರಿಂದ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ.ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ನಂಬಿದ್ದರು. ಹೀಗಾಗಿ ಗ್ರಾಮ ಸ್ವರಾಜ್ಯವನ್ನು ಪ್ರತಿಪಾದಿಸಿದರು.ಗ್ರಾಮಗಳ ಅಭಿವೃದ್ದಿ ಇಲ್ಲದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ ಎನ್ನುವುದು ಗಾಂಧೀಜಿಯವರ ನೀತಿಯಾಗಿತ್ತು ಎಂದು ಸಿಎಂ ಹೇಳಿದರು.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಪರಿಷತ್ ಮುಖ್ಯ ಸಚೇತಕ ಬಿ.ಕೆ.ಸಲೀಂ ಮತ್ತಿತರರು ಉಪಸ್ಥಿತರಿದ್ದರು.
ಕುಸಿದು ಬಿದ್ದ ಉಪ್ಪಿನಂಗಡಿ ಗ್ರಾ.ಪಂ.ಅಧ್ಯಕ್ಷೆ
ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಪ್ರಶಸ್ತಿ ಸ್ವೀಕಾರ ಸಮಾರಂಭ ಮುಗಿದ ಬಳಿಕ ಭೋಜನ ಮಾಡುವ ವೇಳೆ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಕುಸಿದು ಬಿದ್ದರು. ಕೂಡಲೇ ಅವರನ್ನು ಸ್ಥಳದಲ್ಲಿದ್ದ ವೈದ್ಯರು ಪರೀಕ್ಷಿಸಿ ಆಸ್ಪತ್ರೆಗೆ ದಾಖಲಿಸಲು ಸೂಚಿಸಿದಂತೆ, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ವಿವಿಧ ಪರೀಕ್ಷೆಗಳನ್ನು ನಡೆಸಲಾಯಿತು. ಸಾಯಂಕಾಲದ ವೇಳೆ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ . ಕಾರ್ಯಕ್ರಮದ ಒತ್ತಡದಿಂದಾಗಿ ಮಧ್ಯಾಹ್ನದ ಭೋಜನ ತುಸು ವಿಳಂಬವಾಗಿದ್ದರಿಂದ ದೇಹಾರೋಗ್ಯದಲ್ಲಿ ವ್ಯತ್ಯಯವುಂಟಾಗಿರುವ ಸಾಧ್ಯತೆಯನ್ನು ಅಂದಾಜಿಸಲಾಗಿದೆ ಎಂದು ಸ್ಥಳದಲ್ಲಿದ್ದ ಪಂಚಾಯತ್ ಸದಸ್ಯ ಯು ಟಿ ತೌಶಿಫ್ ಪತ್ರಿಕೆಗೆ ತಿಳಿಸಿದ್ದಾರೆ.