ಮಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಕಮಿಷನ್ ದಂಧೆ ನಡೆಸುತ್ತಿದೆ ಎಂದು ಆರೋಪಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಮಂಗಳೂರು ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಯಿತು.ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ಶೇ.40 ಕಮಿಷನ್ ಆರೋಪ ಮಾಡಿತ್ತು. ಈ ಬಗ್ಗೆ ಯಾವುದೇ ದಾಖಲೆ ನೀಡಿರಲಿಲ್ಲ.
ಇದೇ ಕಾರಣಕ್ಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಜೈಲಿಗೆ ಹೋಗಿದ್ದರು.ನಾವು ಭ್ರಷ್ಟಾಚಾರರಹಿತ ಆಡಳಿತ ನೀಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಕಮಿಷನ್ ದಂಧೆ ನಡೆಸುತ್ತಿದೆ ಎಂದು ಆರೋಪಿಸಿದರು.ಐಟಿ ದಾಳಿಯಲ್ಲಿ ಕಾಂಗ್ರೆಸ್ ಮುಖಂಡರ ಆಪ್ತರ ಮನೆಯಲ್ಲಿ ಕೋಟಿಗಟ್ಟಲೆ ಹಣ ಪತ್ತೆಯಾಗಿದೆ. ಇದು ಕಾಂಗ್ರೆಸ್ನ ಕಮಿಷನ್ ದಂಧೆಗೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿಗೆ ಹಣ ನೀಡುತ್ತಿಲ್ಲ. ಶಾಸಕರ ಅನುದಾನ ಬಿಡುಗಡೆ ಆಗಿಲ್ಲ, ಬಿಸಿಯೂಟ ಯೋಜನೆಗೂ ಹಣವಿಲ್ಲ, ವಿದ್ಯುತ್ ದರ, ತೆರಿಗೆ ಹೆಚ್ಚಳ ಮಾಡಲಾಗಿದೆ. ಕೆಎಸ್ಆರ್ಟಿಸಿಗೆ ಅನುದಾನ ಬಿಡುಗಡೆ ಆಗಿಲ್ಲ, ಗೃಹಲಕ್ಷ್ಮಿ ಯೋಜನೆಯ ಹಣ ಕೆಲವೇ ಮಂದಿಗೆ ಒಂದು ಕಂತು ಮಾತ್ರ ಬಂದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ ಎಂ.ಮಾತನಾಡಿ, ರಾಜ್ಯದಲ್ಲಿ ಭ್ರಷ್ಟಾಚಾರದ ಸರಕಾರ ಆಳ್ವಿಕೆ ನಡೆಸುತ್ತಿದೆ.ಕರ್ನಾಟಕ ಸರಕಾರ ಕಾಂಗ್ರೆಸ್ ಪಕ್ಷದ ಎಟಿಎಂ ಆಗಿದೆ.ಐಟಿ ದಾಳಿಯಲ್ಲಿ ಕಾಂಗ್ರೆಸ್ ಪಕ್ಷದ ಆಪ್ತರ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಅಧಿಕಾರಿಗಳ ವರ್ಗಾವಣೆಯಲ್ಲಿ ಕಮಿಷನ್ ಪಡೆಯುತ್ತಿರುವ ಸರಕಾರ ಇದೀಗ ಗುತ್ತಿಗೆದಾರರಿಗೆ ಬಿಲ್ ಮೊತ್ತ ಪಾವತಿಸಿ ಅವರಿಂದ ಕಮಿಷನ್ ಪಡೆದಿದೆ ಎಂದು ಆರೋಪಿಸಿದರು.
ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಬಿಜೆಪಿ ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಬೆಳ್ತಂಗಡಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷೆ ಪ್ರಭಾ ಮಾಲಿನಿ, ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ಮನಪಾ ಸಚೇತಕ ಪ್ರೇಮಾನಂದ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರೂಪಾ ಬಂಗೇರ, ರಮೇಶ್ ಕಂಡೆಟ್ಟು, ಪ್ರಮುಖರಾದ ಶಕೀಲಾ ಕಾವ, ಪೂರ್ಣಿಮಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.