ನೆಲ್ಯಾಡಿ: ರಕ್ಷಿತಾರಣ್ಯ ಪ್ರದೇಶದ ನದಿ ಕಿನಾರೆಯಲ್ಲಿ ಅಕ್ರಮವಾಗಿ ಜಾನುವಾರು ಕಡಿದು ಮಾಂಸ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿರುವ ಘಟನೆ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ನಡೆದಿದೆ. ದಾಳಿ ವೇಳೆ ನಾಲ್ವರು ಪರಾರಿಯಾಗಿರುವುದಾಗಿ ವರದಿಯಾಗಿದೆ.
ಶಿರಾಡಿ ಗ್ರಾಮದ ಅಡ್ಡಹೊಳೆ ಸೇತುವೆ ಸಮೀಪ, ಶಿರಾಡಿ-ಶಿಶಿಲ ರಕ್ಷಿತಾರಣ್ಯದ ನದಿ ಕಿನಾರೆಯಲ್ಲಿ ಅಕ್ರಮವಾಗಿ ಜಾನುವಾರು ಕಡಿದು ಮಾಂಸ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ನೆಲ್ಯಾಡಿ ಹೊರಠಾಣೆ ಪೊಲೀಸರು ದಾಳಿ ನಡೆಸಿದ್ದರು. ಪೊಲೀಸರು ದಾಳಿ ನಡೆಸುತ್ತಿದ್ದಂತೆ ಸ್ಥಳದಲ್ಲಿದ್ದ ನಾಲ್ವರು ಅಲ್ಲಿಂದ ಓಡಿ ಪರಾರಿಯಾಗಿದ್ದಾರೆ. ಪ್ಲಾಸ್ಟಿಕ್ ಚೀಲ, ಪ್ಲಾಸ್ಟಿಕ್ ಟರ್ಪಾಲು, ಅಡಿಕೆ ಮರದ ಗರಿಗಳನ್ನು ನೆಲದಲ್ಲಿ ಹಾಸಿ ಮಾಂಸ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ. ಜಾನುವಾರು ಮಾಂಸ ಮಾಡಲು ಉಪಯೋಗಿಸುತ್ತಿದ್ದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.