ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿಯ ಚಿಂತನೆ ಮೂಡಲಿ – ಕೋಟ ಶ್ರೀನಿವಾಸ ಪೂಜಾರಿ
ಪುತ್ತೂರು:- ವಿದ್ಯಾರ್ಥಿಗಳಲ್ಲಿ ರಾಷ್ಟ್ರ ಭಕ್ತಿಯ ಚಿಂತನೆಯನ್ನು ಮೂಡಿಸುವ ಶಿಕ್ಷಣ ಪ್ರತಿಯೊಂದು ವಿದ್ಯಾಸಂಸ್ಥೆಗಳಲ್ಲೂ ದೊರಕಬೇಕು. ಬದಲಾಗುತ್ತಿರುವ ಕಾಲಘಟ್ಟದಲ್ಲಿ ಯಾವ ರೀತಿಯ ಶಿಕ್ಷಣ ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣಕ್ಕೆ ಪೂರಕವಾಗಬಹುದು ಎಂಬ ವಿಚಾರದೆಡೆಗೆ ಶಿಕ್ಷಣ ಸಂಸ್ಥೆಗಳು ಗಮನ ಹರಿಸಬೇಕು ಎಂದು ವಿಧಾನ ಪರಿಷತ್ನ ಮಾಜಿ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ 2023-24ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.
ಒಬ್ಬ ಧೀಮಂತ ನಾಯಕನಿಂದ ಇಂದು ಇಡೀ ವಿಶ್ವವೇ ಭಾರತದೆಡೆಗೆ ತಿರುಗಿ ನೋಡುವಂತಾಗಿದೆ ಇದಕ್ಕೆ ಕಾರಣೀಕರ್ತರಾದ ನಾಯಕರನ್ನು ನಮ್ಮ ಆದರ್ಶರನ್ನಾಗಿಟ್ಟುಕೊಂಡು ನಮ್ಮ ಬದುಕು ಯಾವ ದಿಶೆಯಲ್ಲಿ ಸಾಗಬೇಕು ಎಂಬುದನ್ನು ನಿರ್ಧರಿಸುವ ಪ್ರಬುದ್ಧತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಬಳಿಕ ಪತ್ರಿಕೋದ್ಯಮ ವಿದ್ಯಾರ್ಥಿಗಳ ಪ್ರಾಯೋಗಿಕ ವಿಶೇಷ ಸಂಚಿಕೆಯನ್ನು ಅತಿಥಿಗಳು ಬಿಡುಗಡೆಗೊಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾಟಟ ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ ವಿದ್ಯಾರ್ಥಿಗಳು ನಾಯಕತ್ವದ ಗುಣವನ್ನು ವಿದ್ಯಾರ್ಥಿ ಜೀವನದಲ್ಲೇ ಮೈಗೂಡಿಸಿಕೊಳ್ಳಬೇಕು. ನಾಯಕನಾದವನು ತನ್ನ ಸಕಲ ಜವಾಬ್ದಾರಿಯನ್ನು ಮನಗಂಡು ಅದಕ್ಕೆ ಪೂರಕವಾಗಿ ಕೆಲಸ ಮಾಡಬೇಕು ಎಂದು ನುಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ಕ್ಷೇಮಪಾಲಕ ಡಾಟ ಅರುಣ್ ಪ್ರಕಾಶ್ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾಟ ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳೀಕೃಷ್ಣ ಕೆ ಎನ್, ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್, ವಿಶೇಷ ಅಧಿಕಾರಿ ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ನಾಯಕ್, ವಿದ್ಯಾರ್ಥಿ ಸಂಘದ ಅಧ್ಯಕ್ಷ ತೇಜಸ್ ಜಿ ವಿ, ಕಾರ್ಯದರ್ಶಿ ಚೇತನ್ ಎಂ ಟಿ , ಜೊತೆ ಕಾರ್ಯದರ್ಶಿ ಅನಿಶ ಕೆ ಎನ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ತೇಜಸ್ ಜಿ ವಿ ಸ್ವಾಗತಿಸಿ, ಅನಿಶ ಕೆ ಎನ್ ವಂದಿಸಿದರು. ವಿದ್ಯಾರ್ಥಿನಿ ಕೀರ್ತನಶ್ರೀ ಕಾರ್ಯಕ್ರಮ ನಿರೂಪಿಸಿದರು.