ಡಾ| ಎಂ.ಎನ್.ರಾಜೇಂದ್ರ ಕುಮಾರ್‌ರವರಿಗೆ ‘ಕರುನಾಡ ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ ‘ಸಹಕಾರ ರತ್ನ’ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಕರ್ನಾಟಕ ಮಾಧ್ಯಮ ಸಹಕಾರ ಹಾಗೂ “ದಿ ನ್ಯೂಸ್ ಪೇಪರ್ಸ್ ಅಸೋಸಿಯೇಶನ್ ಆಫ್ ಕರ್ನಾಟಕ’ ವತಿಯಿಂದ “ಕರುನಾಡ ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು.ಕರ್ನಾಟಕ ಸರಕಾರದ ವಿಶ್ರಾಂತ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಅವರು ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.


ಸಹಕಾರ ಕ್ಷೇತ್ರದ ಸಮಾಜ ಸೇವೆಗೆ ಗೌರವ:
ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ 29 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಡಾ| ರಾಜೇಂದ್ರ ಕುಮಾರ್ ಅವರು ಪ್ರಾಮಾಣಿಕ ಸೇವೆ ನೀಡಿ ಬ್ಯಾಂಕನ್ನು ಅತ್ಯುನ್ನತ ಮಟ್ಟಕ್ಕೇರಿಸಿ ಜನಸ್ನೇಹಿ ಬ್ಯಾಂಕನ್ನಾಗಿ ರೂಪಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಸೇವೆಯ ಪರಿಕಲ್ಪನೆಯ ಮೂಲಕ ಸಹಕಾರಿ ರಂಗಕ್ಕೆ ಹೊಸ ಆಯಾಮ ನೀಡಿದ್ದಾರೆ. ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಕೋರ್ ಬ್ಯಾಂಕಿಂಗ್‌ನಂತಹ ಉತ್ಕೃಷ್ಟ ತಂತ್ರಜ್ಞಾನ, ಸುಸಜ್ಜಿತ ವಾಹನದಲ್ಲಿ ಮೊಬೈಲ್ ಬ್ಯಾಂಕ್ ಸೇವೆ ರಾಜ್ಯದ ಸಹಕಾರಿ ರಂಗದಲ್ಲಿ ಮೊದಲ ಬಾರಿಗೆ ಪರಿಚಯಿಸಿದ ಹೆಗ್ಗಳಿಕೆ ಡಾ| ರಾಜೇಂದ್ರ ಕುಮಾರ್ ಅವರಿಗೆ ಸಲ್ಲುತ್ತದೆ.
ನವೋದಯ ಸ್ವ ಸಹಾಯ ಸಂಘಗಳ ಹರಿಕಾರರಾಗಿ, ನವೋದಯ ಸ್ವಸಹಾಯ ಸಂಘಗಳ ಮೂಲಕ ಮಹಿಳಾ ಸಶಕ್ತೀಕರಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದಾರೆ. ಎರಡನೇ ಬಾರಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾಗಿ ಸಹಕಾರಿ ಬ್ಯಾಂಕಿಂಗ್ ಹಾಗೂ ಸಾಮಾಜಿಕ ರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ. ಸಹಕಾರ ಕ್ಷೇತ್ರದಲ್ಲಿ 4 ದಶಕಗಳ ಕಾಲ ನಿರಂತರ ಸಮಾಜಮುಖೀ ಸೇವೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಹಕಾರ ಮತ್ತು ಸಾಮಾಜಿಕ ಸೇವಾ ವಲಯದಲ್ಲಿ ಮಾಡಿರುವ ಸೇವೆಯನ್ನು ಪರಿಗಣಿಸಿ ಕರುನಾಡ ‘ಕರ್ನಾಟಕ ರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ.
ಸಮಾರಂಭದಲ್ಲಿ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಜಿ.ಆರ್. ವಿಶ್ವನಾಥ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಡಾ| ಎಸ್. ಚಂದ್ರಶೇಖರ ಶೆಟ್ಟಿ, ವಿಶ್ರಾಂತ ಪೊಲೀಸ್ ಮಹಾ ನಿರ್ದೇಶಕ ಬಿ.ಎನ್. ಗರುಡಚಾರ್, ದಿ ನ್ಯೂಸ್ ಪೇಪರ್ಸ್ ಅಸೋಸಿಯೇಶನ್ ಆಫ್ ಕರ್ನಾಟಕದ ಸಂಸ್ಥಾಪಕ ಅಧ್ಯಕ್ಷ ಶ್ರಾವಣ ಲಕ್ಷ್ಮಣ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here