ಪುತ್ತೂರು: ದ.ಕ.ಜಿಲ್ಲಾ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ, ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ, ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಇವುಗಳ ಸಹಯೋಗದಲ್ಲಿ ಡಿ.9ರ ಶನಿವಾರ ಪುತ್ತೂರು ತಾಲೂಕಿನ ಕಬಕ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಮಾಸೋತ್ಸವದ ಪ್ರಯುಕ್ತ ಮಕ್ಕಳ ಹಕ್ಕುಗಳ ಜಾಗೃತಿ ಮಾಹಿತಿ ಕಾರ್ಯಕ್ರಮ ಹಾಗೂ ಜಾಗೃತಿ ಜಾಥಾ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಪತ್ರಕರ್ತ ಸಂಶುದ್ಧೀನ್ ಸಂಪ್ಯ ಅವರು, ಪೋಕ್ಸೋ ಕಾಯ್ದೆ, ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳು ಹಾಗೂ ಮೊಬೈಲ್ ದುರ್ಬಳಕೆಯ ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಕೋಶಾಧಿಕಾರಿ ರಾಜೇಶ್ವರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬೆಂಗಳೂರು ಚೈಲ್ಡ್ ರೈಟ್ಸ್ ಟ್ರಸ್ಟ್‌ನ ಸಂಯೋಜಕಿ ಕಸ್ತೂರಿ ಬೊಳುವಾರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಅಧ್ಯಕ್ಷೆ ನಯನಾ ರೈ ಸ್ವಾಗತಿಸಿದರು. ಶಿಕ್ಷಕಿ ಶಾಂತ ವಂದಿಸಿದರು. ಶಿಕ್ಷಣ ಸಂಪನ್ಮೂಲ ಕೇಂದ್ರದ ಜೊತೆ ಕಾರ್ಯದರ್ಶಿ ಸುಮಂಗಳಾ ಶೆಣೈ ಆಶಯ ಗೀತೆ ಹಾಡಿದರು. ಶಿಕ್ಷಣ ಸಂಪನ್ಮೂಲ ಕೇಂದ್ರದ ಸದಸ್ಯ ಪ್ರಶಾಂತ್ ಮುರ ನಿರೂಪಿಸಿದರು. ಮಾಹಿತಿ ಕಾರ್ಯಕ್ರಮ ನಡೆದ ಬಳಿಕ ಕಬಕ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಯಿತು.