ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ನೆಲ್ಯಾಡಿ ವಲಯ ಇದರ ಸಹಕಾರದೊಂದಿಗೆ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ’ಸಾಮಾಜಿಕ ಜಾಲತಾಣದಿಂದ ಮಕ್ಕಳ ಮೇಲಾಗುವ ದುಷ್ಪರಿಣಾಮಗಳು ಮತ್ತು ಪರಿಹಾರ’ ಕುರಿತ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಡಿ.20ರಂದು ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು.
ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಿಶಿರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಬೆಳ್ಳಾರೆ ಆಯುರ್ವೇದ ಆಸ್ಪತ್ರೆಯ ಆಯುರ್ವೇದ ಶಸ್ತ್ರ ಚಿಕಿತ್ಸಾ ತಜ್ಞೆ ಡಾ.ಜಯಶ್ರೀ ಶ್ರೀಕಾಂತ್ ಭಟ್‌ರವರು ಸಾಮಾಜಿಕ ಜಾಲತಾಣದಿಂದ ಮಕ್ಕಳ ಮೇಲಾಗುವ ದುಷ್ಪರಿಣಾಮ ಮತ್ತು ಪರಿಹಾರದ ಕುರಿತು ಮಾಹಿತಿ ನೀಡಿದರು. ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾಕರ ರೈಯವರು ಸಂದರ್ಭೋಚಿತವಾಗಿ ಮಾತನಾಡಿದರು. ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಸಲಾಂ ಬಿಲಾಲ್, ಪ್ರಗತಿಬಂಧು ಕೇಂದ್ರ ಒಕ್ಕೂಟ ಸಮಿತಿ ಅಧ್ಯಕ್ಷ ಸಂತೋಷ್ ಕೇನ್ಯ, ನೆಲ್ಯಾಡಿ ವಲಯ ಅಧ್ಯಕ್ಷ ಕುಶಾಲಪ್ಪ ಗೌಡ, ಕಡಬ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಕೆ., ಸದಸ್ಯ ಶಿವಪ್ರಸಾದ್ ಮೈಲೇರಿ, ನೆಲ್ಯಾಡಿ ವಲಯ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಆರ್ಥಿಕ ನೆರವಿನ ಮಂಜೂರಾತಿ ಪತ್ರವನ್ನು ಫಲಾನುಭವಿಗಳಿಗೆ ಈ ಸಂದರ್ಭದಲ್ಲಿ ವಿತರಿಸಲಾಯಿತು. ಜ್ಞಾನ ವಿಕಾಸ ಮಹಿಳಾ ತಂಡದ ಸದಸ್ಯೆ ಆಶಾಲತಾ ಕೊಣಾಜೆ ಅನಿಸಿಕೆ ವ್ಯಕ್ತಪಡಿಸಿದರು. ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ನಾವೂರು ಸ್ವಾಗತಿಸಿ, ಜ್ಞಾನ ವಿಕಾಸ ಸಂಯೋಜಕಿ ಚೇತನಾ ವಂದಿಸಿದರು. ಕಡಬ ವಲಯ ಮೇಲ್ವಿಚಾರಕಿ ರವಿಪ್ರಸಾದ್ ಅಲಾಜೆ ಕಾರ್ಯಕ್ರಮ ನಿರೂಪಿಸಿದರು.