
ಹಿರೇಬಂಡಾಡಿ: ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಅವರು ಜ.11ರಂದು ಹಿರೇಬಂಡಾಡಿ ಸರಕಾರಿ ಪ್ರೌಢಶಾಲೆ ಹಾಗೂ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆಗೆ ಭೇಟಿ ನೀಡಿ ನರೇಗಾ ಯೋಜನೆಯಡಿ ನಡೆದ ಆಟದ ಮೈದಾನ, ಹವಾನಿಯಂತ್ರಿತ ಭೋಜನಾಲಯ, ಹೈಟೆಕ್ ಶೌಚಾಲಯದ ವೀಕ್ಷಣೆ ಮಾಡಿ ಮೆಚ್ಚುಗೆ ಸೂಚಿಸಿದರು.

ಸರಕಾರಿ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವ ಮೂಲಕ ಹಿರೆಬಂಡಾಡಿ ಗ್ರಾಮ ಪಂಚಾಯತ್ ರಾಜ್ಯಕ್ಕೆ ಮಾದರಿ ಗ್ರಾಮ ಪಂಚಾಯತ್ ಆಗಿದೆ ಎಂದು ಡಾ.ಆನಂದ ಅವರು ಪ್ರಶಂಸೆಯನ್ನು ವ್ಯಕ್ತಪಡಿಸಿದರು. ಗ್ರಾಮ ಪಂಚಾಯತ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಹಾಗೂ ಜನಪ್ರತಿನಿಧಿಗಳ ದೂರದೃಷ್ಟಿಯ ಯೋಜನೆಗಳನ್ನು ಮತ್ತು ಅಭಿವೃದ್ಧಿ ಪರ ಕಾರ್ಯವೈಖರಿ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಹಿರೆಬಂಡಾಡಿ ಗ್ರಾ.ಪಂ.ಅಧ್ಯಕ್ಷ ಸದಾನಂದ ಶೆಟ್ಟಿ, ಸದಸ್ಯ ಹಮ್ಮಬ್ಬ ಶೌಕತ್ ಆಲಿ ಅವರು ಡಾ.ಆನಂದ ಅವರಿಗೆ ಮಾಹಿತಿ ನೀಡಿದರು. ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ, ಹಿರೆಬಂಡಾಡಿ ಪ್ರೌಢಶಾಲೆಯ ಶಿಕ್ಷಕ ಸೀತಾರಾಮ, ಗ್ರಾಮ ಪಂಚಾಯತ್‌ನ ನರೇಗಾ ಯೋಜನೆಯ ಚೈತ್ರಾ ಡಿ.ಕೆ., ಚಿತ್ರಾ, ಸಿಬ್ಬಂದಿ ಸೋಮನಾಥ ಉಪಸ್ಥಿತರಿದ್ದರು.
