ಆರ್ಥಿಕವಾಗಿ ಪುತ್ತೂರು ಸದೃಢವಾಗಬೇಕಾದರೆ ವಿದ್ಯಾರ್ಥಿಗಳು ಹೆಚ್ಚಿನ ಯಶಸ್ಸು ಸಾಧಿಸಬೇಕು: ಅಶೋಕ್ ಕುಮಾರ್ ರೈ
ಪುತ್ತೂರು: ಆರ್ಥಿಕವಾಗಿ ಪುತ್ತೂರು ಸದೃಢವಾಗಬೇಕಾದರೆ ವಿದ್ಯಾರ್ಥಿಗಳು ಹೆಚ್ಚಿನ ಯಶಸ್ಸು ಸಾಧಿಸಬೇಕು. ಹೆಚ್ಚಿನ ಕೈಗಾರಿಕೆಗಳು ಪುತ್ತೂರಿನಲ್ಲಿ ಪ್ರಾರಂಭಗೊಳ್ಳುವಂತೆ ಮಾಡಿ ಯುವ ಜನತೆಗೆ ಉದ್ಯೋಗ ಸೃಷ್ಟಿಸಲು ಶ್ರಮವಹಿಸುತ್ತೇನೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಅವರು ಪುತ್ತೂರಿನ ಜೈನ ಭವನದಲ್ಲಿ ನಡೆದ ಪುತ್ತೂರಿನ ಪ್ರಗತಿ ಪ್ಯಾರಾ ಮೆಡಿಕಲ್ ಕಾಲೇಜು ಮತ್ತು ಅಲೈಡ್ ಹೆಲ್ತ್ ಸೈನ್ಸಸ್ ನ 2023-24 ನೇ ಸಾಲಿನ ವಿದ್ಯಾರ್ಥಿಗಳ ಫ್ರೆಶರ್ಸ್ ಡೇ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ಡಾ. ಯು. ಶ್ರೀಪತಿ ರಾವ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿ ಸಂಸ್ಥೆಯ ಬೆಳವಣಿಗೆಗಳ ಬಗ್ಗೆ ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಇ. ಎಸ್. ಐ. ಆಸ್ಪತ್ರೆ ಯ ವೈದ್ಯಾಧಿಕಾರಿ ಡಾ ಸುಲೇಖ ವರದರಾಜ್, ಡಾ. ಸುಧಾ ಎಸ್. ರಾವ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರಗತಿ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲೆ ಪ್ರೀತ ಹೆಗ್ಡೆ ಮಾತನಾಡಿ ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲಾ ಸಹಕಾರವನ್ನು ಆಡಳಿತ ಮಂಡಳಿ ಹಾಗೂ ಸಂಸ್ಥೆ ನೀಡಲಿದೆ ಎಂದು ತಿಳಿಸಿದರು. ವೇದಿಕೆಯಲ್ಲಿ ಪ್ರಗತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನ ಪ್ರಾಂಶುಪಾಲ ಅಂಕಿತ.ಜಿ., ಉಪ ಪ್ರಾಂಶುಪಾಲೆ ಚೈತ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ 2022-23 ನೆ ಸಾಲಿನಲ್ಲಿ ಅಂತಿಮ ವರ್ಷದ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.ಸಾರ್ವಜನಿಕ ಸಂಪರ್ಕಾಧಿಕಾರಿ ಸಂತೋಷ್ ರೈ ಸಹಕರಿಸಿದರು. ವಿದ್ಯಾರ್ಥಿನಿ ಫಾತಿಮತ್ ಅಶೀಬ ವಂದಿಸಿದರು.ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.