ಪುತ್ತೂರು: ದ.ಕ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಕಾರ್ಯ ನಿರ್ವಹಣೆಗಾಗಿ ಸ್ಥಿರ ಕಣ್ಗಾವಲು ತಂಡ ರಚಿಸಿ ಆದೇಶ ಹೊರಡಿಸಲಾಗಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ನೇಮಕವಾಗಿರುವ ಒಟ್ಟು 24 ಜನರಲ್ಲಿ 23 ಜನ ವಿವಿಧ ಶಿಕ್ಷಣ ಸಂಸ್ಥೆಗಳ ಶಿಕ್ಷಕರಾಗಿದ್ದಾರೆ. ಇತರ ವಿಧಾಸಭಾ ಕ್ಷೇತ್ರಗಳಲ್ಲಿ ಎಲ್ಲಾ ಇಲಾಖೆಗಳ ಸಿಬ್ಬಂದಿಗಳನ್ನು ನಿಯೋಜಿಸಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರವೇ ಶಿಕ್ಷಕರನ್ನು ನೇಮಿಸಿರುವುದು ಕೆಳ ಹಂತದ ಅಧಿಕಾರಿಗಳ ಪೂರ್ವಾಗ್ರಹ ಪೀಡಿತ ಕ್ರಮವಾಗಿದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಎಸ್ ಆರ್ ಹರೀಶ್ ಆಚಾರ್ಯ ಹೇಳಿದ್ದಾರೆ.
ಪುತ್ತೂರು ವಿಧಾನಸಭಾ ಕ್ಷೇತ್ರದ ಸ್ಥಿರ ಕಣ್ಗಾವಲು ತಂಡದ ನೇಮಕ ಆದೇಶವು ಮುಖ್ಯ ಚುನಾವಣಾಧಿಕಾರಿಗಳ ಆದೇಶದ ಮಾನದಂಡ ಮತ್ತು ಆಶಯಕ್ಕೆ ವಿರುದ್ಧವಾಗಿದೆ. ಪ್ರೌಢ ಶಾಲಾ ಶಿಕ್ಷಕರು ಮತ್ತು ಪದವಿ ಪೂರ್ವ ಕಾಲೇಜುಗಳ ಶಿಕ್ಷಕರು ಶೈಕ್ಷಣಿಕ ವರ್ಷದ ವಾರ್ಷಿಕ ಪರೀಕ್ಷಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಶಿಕ್ಷಕರನ್ನು ಸಂಪೂರ್ಣವಾಗಿ ಚುನಾವಣಾ ಕಾರ್ಯದಲ್ಲಿ ಬಳಸಿಕೊಳ್ಳುವುದರಿಂದ ವಿದ್ಯಾರ್ಥಿಗಳ ಪರೀಕಾ ಫಲಿತಾಂಶದ ಮೇಲೆ ನೇತ್ಯಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ನೀಡಿರುವ ಆದೇಶವನ್ನು ಪುನರ್ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಹರೀಶ್ ಆಚಾರ್ಯ, ದ.ಕ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.