ಸಿವಿಲ್ ಸೇವೆಗಳ ನೇಮಕಾತಿಯಲ್ಲೂ ಕ್ರೀಡಾಪಟುಗಳಿಗೆ ಶೇ.2 ಮೀಸಲಾತಿ – ರಾಜ್ಯ ಸಂಪುಟ ಸಭೆಯಲ್ಲಿ ನಿರ್ಣಯ – ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ 2 ಸೀರೆ

0

ಬೆಂಗಳೂರು: ಅರಣ್ಯ ಮತ್ತು ಗೃಹ ಇಲಾಖೆಯ ನೇಮಕಾತಿ ವೇಳೆ ಕ್ರೀಡಾಪಟುಗಳಿಗೆ ನೀಡುತ್ತಿರುವ ಶೇ.2ರಷ್ಟು ಮೀಸಲಾತಿಯನ್ನು ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿಗೂ ಅನ್ವಯಿಸಲು ರಾಜ್ಯ ಸರಕಾರ ನಿರ್ಧರಿಸಿದೆ.ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ೩ನೇ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಎಚ್.ಕೆ. ಪಾಟೀಲ್ ಪತ್ರಿಕಾಗೋಷ್ಠಿ ನಡೆಸಿ ಈ ಮಾಹಿತಿ ನೀಡಿದರು. ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿ ಸಂದರ್ಭದಲ್ಲಿ ಕ್ರೀಡಾಪಟುಗಳಿಗೆ ಶೇ.2ರಷ್ಟು ಮೀಸಲಾತಿ ನೀಡುವ ಸಲುವಾಗಿ 1977ರ ಕರ್ನಾಟಕ ಸಿವಿಲ್ ಸೇವಾ (ಸಾಮಾನ್ಯ ನೇಮಕಾತಿ) ನಿಯಮ 9ಕ್ಕೆ ತಿದ್ದುಪಡಿ ತಂದಿದ್ದು, ಕರ್ನಾಟಕ ಸಿವಿಲ್ ಸೇವಾ (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮ-2024ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ರಾಷ್ಟ್ರ ಮತ್ತು ಅಂತರ್ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ಗಣನೀಯ ಸಾಧನೆ ಮಾಡಿದವರಿಗೆ ಮಾತ್ರ ಇದು ಅನ್ವಯವಾಗಲಿದೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ಸೀರೆ: 2023-24ನೇ ಸಾಲಿಗೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ರಾಜ್ಯದ 69,899 ಅಂಗನವಾಡಿ ಕಾರ್ಯಕರ್ತೆಯರು ಮತ್ತು 67,570 ಸಹಾಯಕಿಯರಿಗೆ ತಲಾ ಎರಡು ಸೀರೆಗಳಂತೆ ಒಟ್ಟು 2,74,938 ಸೀರೆಗಳನ್ನು 13.75 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಖರೀದಿಸಿ ಒದಗಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ.

LEAVE A REPLY

Please enter your comment!
Please enter your name here