ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ನೇಮಕ ವಿಚಾರದಲ್ಲಿ ಭಿನ್ನಾಭಿಪ್ರಾಯ ಹಿನ್ನಲೆ-ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಬಿಜೆಪಿ ರಾಷ್ಟ್ರೀಯ ಪಕ್ಷ, ಇಲ್ಲಿ ಯಾವುದೇ ಗೊಂದಲ ಇಲ್ಲ – ಸತೀಶ್ ಕುಂಪಲ

0

ಕಾಣಿಯೂರು: ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರ ನೇಮಕಾತಿ ವಿಚಾರದಲ್ಲಿ ಉಂಟಾದ ಅಸಮಾಧಾನದ ಹಿನ್ನಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರ ನೇತೃತ್ವದಲ್ಲಿ ಸುಳ್ಯದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆದು ಚರ್ಚೆ ನಡೆಸಲಾಗಿದೆ. ಎಲ್ಲವನ್ನೂ ಸರಿಪಡಿಸಿಕೊಂಡು ಹೋಗುತ್ತೇವೆ ಎಂದು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ. ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷರ ನೇಮಕ ವಿಷಯದಲ್ಲಿ ಉಂಟಾದ ಅಸಮಾಧಾನದ ಹಿನ್ನೆಲೆಯಲ್ಲಿ ಸುಳ್ಯ ಬಿಜೆಪಿ ಕೋರ್ ಕಮಿಟಿ ಜೊತೆ ಜಿಲ್ಲಾಧ್ಯಕ್ಷರು ಹಾಗೂ ಮುಖಂಡರು ಸುದೀರ್ಘ ಮಾತುಕತೆ ನಡೆಸಿದ್ದಾರೆ. ಸಭೆಯ ಬಳಿಕ ನಾಯಕರು ಯಾವುದೇ ನಿರ್ಧಾರ ಪ್ರಕಟಿಸಲಿಲ್ಲ. ನಮ್ಮಲ್ಲಿ ಯಾವುದೇ ಅಸಮಾಧಾನ, ಗೊಂದಲ ಇಲ್ಲ, ಎಲ್ಲಾ ವಿಷಯಗಳ ಬಗ್ಗೆ ಚರ್ಚೆ ನಡೆಸಿzವೆ ಎಲ್ಲವನ್ನೂ ಸರಿಪಡಿಸಿಕೊಂಡು ಹೋಗುತ್ತೇವೆ ಎಂದಷ್ಟೇ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.


ದಿನ ಪೂರ್ತಿ ಮ್ಯಾರಥಾನ್ ಚರ್ಚೆ ನಡೆದಿದೆ. ಕೋರ್ ಕಮಿಟಿ ಸದಸ್ಯರು ಹಾಗೂ ಜಿಲ್ಲಾ ಮುಖಂಡರುಗಳ ಮಧ್ಯೆ ತೀವ್ರ ಚರ್ಚೆ ನಡೆಯಿತು. ಕೋರ್ ಕಮಿಟಿ ಸದಸ್ಯರು ತಮ್ಮ ನಿಲುವಿನಲ್ಲಿ ಪಟ್ಟು ಬಿಡದೆ ಚರ್ಚೆ ನಡೆಸಿದರು. ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯ ಬಗ್ಗೆ ಕೋರ್ ಕಮಿಟಿ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪಕ್ಷದಲ್ಲಿ ಪ್ರಜಾಪ್ರಭುತ್ವ ನೆಲೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಬೇಕು.ಕೋರ್ ಕಮಿಟಿ, ಮಂಡಲ ಸಮಿತಿ ಹಾಗೂ ಕಾರ್ಯಕರ್ತರ ತೀರ್ಮಾನಕ್ಕೆ ಬೆಲೆ ನೀಡಬೇಕು ಎಂದು ಕೋರ್ ಕಮಿಟಿ ಸದಸ್ಯರು ತಮ್ಮ ನಿಲುವನ್ನು ಜಿಲ್ಲಾಧ್ಯಕ್ಷರಿಗೆ ಜಿಲ್ಲಾಧ್ಯಕ್ಷರಿಗೆ ತಿಳಿಸಿದ್ದಾರೆ. ಜಿಲ್ಲಾ ಸಮಿತಿ ಮುಖಂಡರು ಸುಳ್ಯದ ಮುಖಂಡರ ಅಹವಾಲನ್ನು ಆಲಿಸಿ ಸಮಾಧಾನಪಡಿಸಿದ್ದಾರೆ. ಎಲ್ಲರೂ ಒಟ್ಟಾಗಿ ಪಕ್ಷ ಸಂಘಟನೆಗಾಗಿ ದುಡಿಯುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಸಂಜೆಯ ತನಕ ಮುಂದುವರಿದ ಚರ್ಚೆಯಲ್ಲಿ ಮಧ್ಯಾಹ್ನದ ಬಳಿಕ ನೂತನ ಅಧ್ಯಕ್ಷ ವೆಂಕಟ್ ವಳಲಂಬೆ ಭಾಗವಹಿಸಿದ್ದರು.ಎಲ್ಲಾ ಸಮಸ್ಯೆಗಳನ್ನು ಸರಿಪಡಿಸಿಕೊಂಡು ಒಟ್ಟಾಗಿ ಕೆಲಸ ಮಾಡಲಾಗುವುದು ಎಂದು ಅವರು ಹೇಳಿದರು. ಬಿಜೆಪಿ ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಪ್ರಭಾರಿ ಗೋಪಾಲಕೃಷ್ಣ ಹೇರಳೆ ಕೋರ್ ಕಮಿಟಿ ಸದಸ್ಯರಾದ ನಿಕಟ ಪೂರ್ವ ಅಧ್ಯಕ್ಷ ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ಸುಬೋಧ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ಕೃಷ್ಣ ಶೆಟ್ಟಿ ಕಡಬ ಭಾಗವಹಿಸಿದ್ದರು.


ವೆಂಕಟ್ ವಳಲಂಬೆಯವರನ್ನು ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾಗಿ ನೇಮಕಗೊಳಿಸಿದ ಹಿನ್ನಲೆಯಲ್ಲಿ ಸುಳ್ಯ ಬಿಜೆಪಿಯಲ್ಲಿ ಅಸಮಾಧಾನ ಉಲ್ಬಣಗೊಂಡು ನಾಯಕರು ಸಭೆ ನಡೆಸಿ ಅಸಹಕಾರ ಘೋಷಣೆ ಮಾಡಿದ್ದರು. ಕಾರ್ಯಕರ್ತರು ಕಚೇರಿಗೆ ಬೀಗ ಜಡಿದಿದ್ದರು. ಈ ಹಿನ್ನಲೆಯಲ್ಲಿ ಬಿಜೆಪಿ ಜಿಲ್ಲಾ ಸಮಿತಿ ಸಭೆಯಲ್ಲಿ ಈ ವಿಷಯ ಪ್ರಸ್ತಾಪ ಆಗಿ. ಜಿಲ್ಲಾಧ್ಯಕ್ಷರು ಹಾಗೂ ಪ್ರಮುಖರು ಬಂದು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಾತುಕತೆ ನಡೆಸುವುದಾಗಿ ತೀರ್ಮಾನಿಸಲಾಗಿತ್ತು. ಈ ಹಿನ್ನಲೆಯಲ್ಲಿ ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಪ್ರಮುಖರು ಸುಳ್ಯಕ್ಕೆ ಆಗಮಿಸಿ ಪ್ರಮುಖರೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.


ಬಿಜೆಪಿ ಕಚೇರಿ ಬಾಗಿಲು ತೆರೆಯಿತು: ವೆಂಕಟ್ ವಲಳಂಬೆ ಅವರನ್ನು ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರಾಗಿ ನೇಮಕಗೊಳಿಸಿದ ಬೆನ್ನಲೇ ಸುಳ್ಯ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನದಿಂದಾಗಿ ಅಸಹಕಾರ ಚಳವಳಿ ನಡೆಸಿ, ಕಚೇರಿಗೆ ಬೀಗ ಜಡಿದಿದ್ದು, ಫೆ 6ರಂದು ಬೆಳಿಗ್ಗೆ ಕಚೇರಿ ಬಾಗಿಲು ತೆರೆಯಲಾಯಿತು.

ಸುಳ್ಯ ಕೋರ್ ಕಮಿಟಿ ಸದಸ್ಯರ ಮಧ್ಯೆ ನಡೆದ ಸಭೆಯಲ್ಲಿ ಯಾವುದೇ ನಿರ್ಧಾರ ಮೂಡಿ ಬರಲಿಲ್ಲ. ಈ ಹಿನ್ನೆಲೆಯಲ್ಲಿ ನಾಯಕರು ಸಭೆಯಿಂದ ಯಾವುದೇ ನಿರ್ಧಾರವನ್ನು ಪ್ರಕಟಿಸಿಲ್ಲ. ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯ ಬಗ್ಗೆ ಕೋರ್ ಕಮಿಟಿ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವಿಚಾರದ ಬಗ್ಗೆ ಬಿಜೆಪಿ ರಾಜಾಧ್ಯಕ್ಷರ ಗಮನಕ್ಕೆ ತರಬೇಕೆಂದು ಹೇಳಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಪಕ್ಷದ ವತಿಯಿಂದ ಸಂಘಟನಾತ್ಮಕವಾಗಿ ಅನೇಕ ಕಾರ್ಯಕ್ರಮವನ್ನು ನಡೆಸುವ ಕುರಿತು ಮತ್ತು ಮುಂಬರುವ ಲೋಕಸಭಾ ಚುನಾವಣೆಯ ದೃಷ್ಟಿಯನ್ನು ಇಟ್ಟುಕೊಂಡು ಸುದೀರ್ಘ ಚರ್ಚೆ ನಡೆಸಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಹಿಂದಿನಿಂದಲೂ ಬಿಜೆಪಿಗೆ ಅಭೂತಪೂರ್ವ ಬೆಂಬಲವನ್ನು ನೀಡುತ್ತಿರುವ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ಹಿರಿಯ ಕಾರ್ಯಕರ್ತರ, ಬೂತ್ ಸಮಿತಿಯವರು ಸೇರಿದಂತೆ ಎಲ್ಲರ ಸಹಕಾರದಿಂದ ಬಿಜೆಪಿ ದೊಡ್ಡ ಪಕ್ಷವಾಗಿ ಬೆಳೆದುಬಂದಿದೆ. ಬಿಜೆಪಿ ರಾಷ್ಟ್ರೀಯ ಪಕ್ಷ. ಇಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲರೂ ಒಟ್ಟು ಸೇರಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕಾಗಿದೆ.
ಸತೀಶ್ ಕುಂಪಲ, ಜಿಲ್ಲಾಧ್ಯಕ್ಷರು, ಬಿಜೆಪಿ ದ. ಕ

LEAVE A REPLY

Please enter your comment!
Please enter your name here