ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ತಾಯಂದಿರ ಸಮಾಲೋಚನಾ ಸಭೆ ಫೆ.7ರಂದು ನಡೆಯಿತು.
ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು ಸಭೆಯ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವಲ್ಲಿ ಹಾಗೂ ಭವಿಷ್ಯದ ಉತ್ತಮ ಪ್ರಜೆಯಾಗಿ ರೂಪುಗೊಳ್ಳಲು ವಿದ್ಯಾರ್ಥಿಗಳ ಹೆತ್ತವರು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹೇಳಿದರು.
ಮುಖ್ಯ ಅತಿಥಿಯಾಗಿದ್ದ ಮಂಗಳೂರು ಲೀಲಾವತಿ ಶೆಟ್ಟಿ ಬಿ.ಎಡ್.ಕಾಲೇಜಿನ ಅಸಿಸ್ಟೆಂಟ್ ಪ್ರೊಫೆಸರ್ ಮಲ್ಲಿಕಾ ಅವರು ಮಕ್ಕಳಿಗೆ ಪರೀಕ್ಷಾ ಭಯ ಎದುರಿಸುವ ಕುರಿತು ಪ್ರಾಯೋಗಿಕವಾಗಿ ಮಾಹಿತಿ ನೀಡಿದರು. ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳನ್ನು ಮಾನಸಿಕವಾಗಿ ಸಿದ್ಧಗೊಳಿಸುವ ಬಗ್ಗೆ ಹೆತ್ತವರೊಂದಿಗೆ ವಿಚಾರ ವಿನಿಮಯ ಮಾಡಿಕೊಂಡರು. ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ.ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್.ಸ್ವಾಗತಿಸಿದರು. ಸಹಶಿಕ್ಷಕ ರಾಧಾಕೃಷ್ಣ ಬಿ., ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಶಿಕ್ಷಕ ವೃಂದದವರು ಸಹಕರಿಸಿದರು.