ಮಂಗಳೂರು:ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರೂ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ವಂಚಿತರಾಗಿರುವ ಮಾಜಿ ಮುಖ್ಯಮಂತ್ರಿ,ಮಾಜಿ ಕೇಂದ್ರ ಸಚಿವರೂ ಆಗಿರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸದಸ್ಯ ಹಿರಿಯ ಬಿಜೆಪಿ ನಾಯಕ ಡಿ.ವಿ.ಸದಾನಂದ ಗೌಡ ಅವರನ್ನು ಕಾಂಗ್ರೆಸ್‌ಗೆ ಸೆಳೆಯುವ ಪ್ರಯತ್ನಗಳು ನಡೆಯುತ್ತಿದ್ದು ಡಿ.ವಿ.ಯವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ವದಂತಿಗಳ ಬೆನ್ನಲ್ಲೇ, ನನ್ನ ರಾಜಕೀಯ ನಿರ್ಧಾರದ ಕುರಿತು ಮಾ.19ರಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡುವುದಾಗಿ ಡಿ.ವಿ.ಸದಾನಂದ ಗೌಡ ಹೇಳಿದ್ದು ಅದು ಮುಂದೂಡಲ್ಪಟ್ಟಿದೆ ಎಂದು ತಿಳಿದು ಬಂದಿದೆ.
ಸುದ್ದಿಗೋಷ್ಠಿಯೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು ಇಂದು ಬೆಂಗಳೂರಿನಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರ ಜೊತೆ ಚರ್ಚೆ ನಡೆಸಲಿರುವ ಕಾರಣ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸದಸ್ಯನಾಗಿದ್ದು ಸಕ್ರಿಯ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿ ಬಳಿಕ ಪಕ್ಷದ ಮುಖಂಡರ ಒತ್ತಡಕ್ಕೆ ಮಣಿದು, ನಿವೃತ್ತಿ ಘೋಷಣೆ ಹಿಂಪಡೆದಿದ್ದ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷರೂ ಆಗಿರುವ ಡಿ.ವಿ.ಯವರು ಬಳಿಕ, ಈ ಬಾರಿ ನಾನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಹೇಳಿದ್ದರಲ್ಲದೆ, ನನಗೆ ಟಿಕೆಟ್ ದೊರೆಯದೇ ಇದ್ದಲ್ಲಿ ಮನಸ್ಸಿಗೆ ನೋವಾಗಲಿದೆ ಎಂದೂ ತಿಳಿಸಿದ್ದರು.ಆದರೂ ಪಕ್ಷ ಅವರಿಗೆ ಈ ಬಾರಿ ಅವಕಾಶ ನೀಡದೇ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ.ಪಕ್ಷದ ಈ ನಿರ್ಧಾರದಿಂದ ಬೇಸರಗೊಂಡಿರುವ ಡಿ.ವಿ.ಸದಾನಂದ ಗೌಡ ಅವರನ್ನು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿಯೂ ಆಗಿರುವ ಡಿ.ಕೆ.ಶಿವಕುಮಾರ್ ಅವರು ಸಂಪರ್ಕಿಸಿ ಪಕ್ಷಕ್ಕೆ ಆಹ್ವಾನಿಸಿದ್ದಾರೆ ಎಂದು ಸುದ್ದಿಯಾಗಿದೆ.