ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎಸ್ ಮಹಮ್ಮದ್ ನೇಮಕಗೊಂಡಿದ್ದಾರೆ.
ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಎಂ.ಎಸ್ ಮಹಮ್ಮದ್ ಅವರಿಗೆ ಇದೀಗ ಮಹತ್ವದ ಹುದ್ದೆ ಲಭಿಸಿದಂತಾಗಿದೆ. ಈ ಹಿಂದೆ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ವಿಟ್ಲ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು ಕೆಪಿಸಿಸಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು. ಮೂರು ಬಾರಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದ ಎಂ.ಎಸ್ ಮಹಮ್ಮದ್ ಅವರು ಒಂದು ಬಾರಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.