ಪ್ರಜಾಪ್ರಭುತ್ವದ ಅಸ್ತ್ರವಾಗಿರುವ ‘ಮತದಾನದ ಹಕ್ಕ’ನ್ನು ಬಳಸಿ: ಲಕ್ಷ್ಮೀಕಾಂತ ರೈ ಅನಿಕೂಟೇಲು
ಸಂಪ್ಯ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮಗೆ ಬೇಕಾದ ಉತ್ತಮ ವ್ಯವಸ್ಥೆಯನ್ನು ಆಯ್ಕೆ ಮಾಡಿಕೊಳ್ಳಲು ಪ್ರತಿಯೊಬ್ಬರಿಗೂ ಹಕ್ಕಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು. ಪ್ರಜಾಪ್ರಭುತ್ವದ ಅಸ್ತ್ರವಾಗಿರುವ ‘ಮತದಾನದ ಹಕ್ಕ’ನ್ನು ಬಳಸುವ ಉತ್ಸಾಹವನ್ನು ಪ್ರತಿಯೊಬ್ಬರೋ ತೋರಿಸಬೇಕು. ನೀವೆಲ್ಲರೂ ಚಲಾಯಿಸುವ ಪ್ರತಿಯೊಂದು ಮತಕ್ಕೂ ಅದರದೇ ಆದ ವಿಶಿಷ್ಟ ಮೌಲ್ಯವಿದೆ ಎಂದು ಪುತ್ತೂರು ತಾಲೂಕು ಮಟ್ಟದ ಸ್ವೀಪ್ ಸಮಿತಿ ತರಬೇತುದಾರ ಹಾಗೂ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ಲಕ್ಷ್ಮೀಕಾಂತ ರೈ ಅನಿಕೂಟೇಲು ಹೇಳಿದರು.
ಪುತ್ತೂರು ತಾಲೂಕಿನ ಸಂಪ್ಯದಲ್ಲಿರುವ ಅಕ್ಷಯ ಕಾಲೇಜಿನಲ್ಲಿ ಪುತ್ತೂರು ತಾಲೂಕು ಸ್ವೀಪ್ ಸಮಿತಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು, ಚುನಾವಣಾ ಆಯೋಗವು ಸಮಾಜದ ಪ್ರತಿಯೊಂದು ವರ್ಗವು ಮತ ಚಲಾಯಿಸಬೇಕು ಎಂಬ ಗುರಿಯನ್ನು ಹೊಂದಿದೆ. ವಿದ್ಯಾರ್ಥಿಗಳಾದ ನೀವೆಲ್ಲರೋ ಕಡ್ಡಾಯವಾಗಿ ಮತದಾನ ಮಾಡುವ ಜೊತೆಗೆ ಸುತ್ತ-ಮುತ್ತಲಿನ ಜನರಿಗೂ ಮತದಾನದ ಮಹತ್ವ ತಿಳಿಸಿಕೊಡಬೇಕು ಎಂಬ ಉದ್ದೇಶದಿಂದ ಶಿಕ್ಷಣ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ಈ ವಿಶೇಷ ಮತದಾರರ ಜಾಗೃತಿ ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಇನ್ನೊರ್ವ ಸಂಪನ್ಮೂಲ ವ್ಯಕ್ತಿಗಳಾಗಿದ್ದ ಪರಮೇಶ್ವರಿ ಮಾತನಾಡಿ ಮತದಾರರ ನೋಂದಣಿ ಕುರಿತು ವಿವರಿಸಿದರು. ಜೊತೆಗೆ ಪ್ರತಿಯೊಬ್ಬ ವಿದ್ಯಾರ್ಥಿಯು ಮತದಾನ ಮಾಡುವಂತೆ ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಅಕ್ಷಯ ಕಾಲೇಜಿನ ಆಡಳಿತಾಧಿಕಾರಿ ಅರ್ಪಿತ್ ಟಿ. ಎ. ಮಾತನಾಡಿ, ಶೇ.100ರಷ್ಟು ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ಆ ದಿಸೆಯಲ್ಲಿ ವಿದ್ಯಾರ್ಥಿಗಳೆಲ್ಲರೂ ತಪ್ಪದೇ ಮತದಾನ ಮಾಡುವ ಜೊತೆಗೆ ಸಮಾಜದ ಎಲ್ಲರೂ ಮತದಾನ ಮಾಡುವಂತೆ ಪ್ರೋತ್ಸಾಹಿಸಬೇಕು ಎಂದರು. ಕಾಲೇಜಿನ ಕನ್ನಡ ಉಪನ್ಯಾಸಕರಾದ ಹರೀಶ್ಚಂದ್ರ ಸಿ. ಮತದಾರರ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.
ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯೋಜಕ ಕಿಶೋರ್ ಕುಮಾರ್ ರೈ ಸ್ವಾಗತಿಸಿ, ಐ.ಕ್ಯೂ.ಎ.ಸಿ. ಸಂಯೋಜಕ ರಾಕೇಶ್ ಕುಳದಪಾರೆ ವಂದಿಸಿದರು. ಕಾಲೇಜಿನ ಎಲ್ಲಾ ಉಪನ್ಯಾಸಕರು, ಬೋದಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಭಾಗ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.