ಸಿಎಂವಿ ಕಾಯ್ದೆಯಂತೆ ಮಾತ್ರ ಹೆಡ್ ಲೈಟ್ ಅಳವಡಿಸಲು ಸಂಚಾರ, ರಸ್ತೆ ಸುರಕ್ಷತಾ ಅಧಿಕಾರಿ ಆದೇಶ
ಪುತ್ತೂರು: ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್ಇಡಿ ದೀಪಗಳನ್ನು ಅಳವಡಿಸುತ್ತಿದ್ದು ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವ್ರ ತೊಂದರೆಯುಂಟಾಗುತ್ತಿದ್ದು, ಇದರಿಂದ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿರುವುದು ಕಂಡು ಬಂದಿರುತ್ತದೆ. ಹಾಗಾಗಿ ಎಲ್ಲಾ ವಾಹನ ಸವಾರರು ತಮ್ಮ ತಮ್ಮ ವಾಹನಗಳ ಎಲ್ ಇ ಡಿ ಹೆಡ್ ಲೈಟ್ ತೆರವು ಮಾಡಿ ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ಅಳವಡಿಸಬೇಕಾಗಿರುವ ಹೆಡ್ ಲೈಟ್ಗಳನ್ನೇ ಅಳವಡಿಸುವಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಬೆಂಗಳೂರು ಇದರ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆಲೋಕ್ ಕುಮಾರ್ ಪೊಲೀಸ್ ಇಲಾಖೆಗೆ ಆದೇಶ ನೀಡಿದ್ದಾರೆ.
ಭಾರಿ ಗಾತ್ರ ವಾಹನಗಳಾದ ಲಾರಿ, ಟ್ರಕ್, ಬಸ್ ಮುಂತಾದವುಗಳು ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ (dazzling and glaring) ಎಲ್ ಇ ಡಿ ದೀಪಗಳನ್ನು ತಮ್ಮ ವಾಹನಗಳಿಗೆ ಅಳವಡಿಸುತ್ತಿರುವುದರಿಂದ ಇತರೆ ವಾಹನ ಚಾಲಕರುಗಳಿಗೆ ವಾಹನ ಚಲಾಯಿಸಲು ತೊಂದರೆಯಾಗುತ್ತಿರುತ್ತದೆ. ಎಲ್ಲಾ ವಾಹನ ಸವಾರರು ತಮ್ಮ ತಮ್ಮ ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ಅಳವಡಿಸಬೇಕಾಗಿರುವ ಹೆಡ್ ಲೈಟ್ಗಳನ್ನೇ ಅಳವಡಿಸಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಒಂದು ವೇಳೆ ಸಿಎಂವಿ ಕಾಯ್ದೆಯಲ್ಲಿನ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ಅಂತಹ ವಾಹನ ಸವಾರರ ವಿರುದ್ಧ ಐಎಂವಿ ಕಾಯ್ದೆಯ ಕಲಂ 177 ರಡಿ ಪ್ರಕರಣಗಳನ್ನು ದಾಖಲಿಸಬಹುದಾಗಿರುತ್ತದೆ. ಆದ್ದರಿಂದ, ಘಟಿಕಾಧಿಕಾರಿಗಳು ತಮ್ಮ ತಮ್ಮ ಘಟಕಗಳಲ್ಲಿ ಸಂಚರಿಸುವ ವಾಹನಗಳಲ್ಲಿ ಈ ರೀತಿಯ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್ಇಡಿ ದೀಪಗಳನ್ನು ಅಳವಡಿಸಿರುವುದು ಕಂಡು ಬಂದಲ್ಲಿ ಅಂತಹ ವಾಹನ ಸವಾರರ ವಿರುದ್ಧ ಐಎಂವಿ ಕಾಯ್ದೆಯ ಕಲಂ 177 ರಡಿ ಪ್ರಕರಣಗಳನ್ನು ದಾಖಲು ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ. ಈ ರೀತಿ ವಾಹನಗಳಲ್ಲಿ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್ಇಡಿ ದೀಪಗಳನ್ನು ಅಳವಡಿಸಿರುವ ವಾಹನ ಚಾಲಕರ ವಿರುದ್ಧ ಜುಲೈ ಮಾಹೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಪ್ರಕರಣಗಳನ್ನು ದಾಖಲಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.