ಶ್ರೀ ರಾಮಕುಂಜೇಶ್ವರ ಆ.ಮಾ.ಶಾಲೆಯಲ್ಲಿ ಪೋಷಕರ ಸಭೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ 2024-25ನೇ ಶೈಕ್ಷಣಿಕ ಸಾಲಿನ ಪ್ರಥಮ ಪೋಷಕರ ಸಭೆ ಜೂ.20ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.
ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಅವರು ಅಧ್ಯಕ್ಷತೆ ವಹಿಸಿ, ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಪ್ರಮುಖವಾದುದು. ಜೀವನದ ಉದ್ದೇಶ, ಜವಾಬ್ದಾರಿಯನ್ನು ಅರಿತು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿದಾಗ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಮೂಡಿಬರಲು ಸಾಧ್ಯ. ಈ ನಿಟ್ಟಿನಲ್ಲಿ ಸಂಸ್ಥೆಯ ನುರಿತ ಶಿಕ್ಷಕ ವೃಂದವು ವಿದ್ಯಾರ್ಥಿಗಳ ಜೊತೆ ಇದ್ದು ಸರ್ವತೋಮುಖ ಬೆಳವಣಿಗೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದರು.

ಮುಖ್ಯ ಅತಿಥಿ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ನಿವೃತ್ತ ಪ್ರಾಂಶುಪಾಲ ಸತೀಶ್ ಭಟ್‌ರವರು ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಪೋಷಕರು ಹಾಗೂ ಶಿಕ್ಷಕರ ಪಾತ್ರದ ಕುರಿತು ಮಾತನಾಡಿ, ವಿದ್ಯಾರ್ಥಿಗಳು ಪಾಠದೊಂದಿಗೆ ಉತ್ತಮ ಸಂಸ್ಕಾರವನ್ನು ಬೆಳೆಸಿಕೊಳ್ಳುವಲ್ಲಿ ಪೋಷಕರ ಹಾಗೂ ಶಿಕ್ಷಕರ ಪಾತ್ರ ಮಹತ್ವವಾದುದು. ಸೂಕ್ತ ಮಾರ್ಗದರ್ಶನ ದೊರೆತಾಗ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದರು.


ಸಂಸ್ಥೆಯ ಆಡಳಿತಾಧಿಕಾರಿ ಆನಂದ್ ಎಸ್.ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಸ್ತುತ ಶೈಕ್ಷಣಿಕ ಸಾಲಿನ ಶಾಲಾ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ಸಂಕ್ಷಿಪ್ತವಾಗಿ ವಿವರಿಸಿದರು. ಕಳೆದ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಉಮೇಶ್ ಶೆಟ್ಟಿ ಸಾಯಿರಾಂ, ಉಪಾಧ್ಯಕ್ಷೆ ಮೀನಾಕ್ಷಿಯವರು ಅನಿಸಿಕೆ ವ್ಯಕ್ತಪಡಿಸಿದರು. ರಕ್ಷಕ ಶಿಕ್ಷಕ ಸಂಘದ ಜೊತೆ ಕಾರ್ಯದರ್ಶಿಗಳಾದ ಗಿರೀಶ್ ಎ.ಪಿ., ಗೀತಾ ದಿನೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಇದೇ ಸಂದರ್ಭದಲ್ಲಿ ಶೈಕ್ಷಣಿಕ ವರ್ಷದ ನೂತನ ಶಿಕ್ಷಕ-ರಕ್ಷಕ ಸಂಘ, ಬಸ್ ಸುರಕ್ಷಾ ಸಮಿತಿ, ವಿದ್ಯಾರ್ಥಿ ಸುರಕ್ಷಾ ಸಮಿತಿ ಹಾಗೂ ತರಗತಿವಾರು ಪೋಷಕ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಯಿತು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಹರೀಶ್ ಬಾರಿಂಜ, ಉಪಾಧ್ಯಕ್ಷರಾಗಿ ಸೌಮ್ಯ, ಜೊತೆ ಕಾರ್ಯದರ್ಶಿಯಾಗಿ ಮಮತಾ ಹಾಗೂ ಪುರಂದರ ಅವರು ಆಯ್ಕೆಗೊಂಡರು.


ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್ ಸ್ವಾಗತಿಸಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ ವಂದಿಸಿದರು. ಸಹಶಿಕ್ಷಕರಾದ ರಾಧಾಕೃಷ್ಣ ಬಿ ಹಾಗೂ ಹರಿಣಿ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಶಿಕ್ಷಕ-ಶಿಕ್ಷಕೇತರ ವೃಂದದವರು ಭಾಗವಹಿಸಿದರು.

LEAVE A REPLY

Please enter your comment!
Please enter your name here