ಜು.13: ಜನಜಾಗೃತಿ ವೇದಿಕೆಯಿಂದ ಡಾ| ಎಲ್.ಎಚ್.ಮಂಜುನಾಥ್ ಅವರಿಗೆ ಅಭಿನಂದನಾ ಕಾರ್ಯಕ್ರಮ

0

ಪುತ್ತೂರು: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ.ಟ್ರಸ್ಟ್ ಇದರ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸುದೀರ್ಘ 23 ವರ್ಷಗಳ ಕಾಲ ಸೇವೆ ಸಲ್ಲಿಸಿ ಮೇ 31 ರಂದು ನಿವೃತ್ತಿ ಹೊಂದಿರುವ ಡಾ| ಎಲ್.ಎಚ್. ಮಂಜುನಾಥ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆ ಮತ್ತು ತಾಲೂಕು ಜನಜಾಗೃತಿ ವೇದಿಕೆ ಮತ್ತು ಜಿಲ್ಲಾ ಜನಜಾಗೃತಿ ವೇದಿಕೆಯ ಸರ್ವ ಸದಸ್ಯರ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ಜು.13ರಂದು ಎಪಿಎಂಸಿ ರಸ್ತೆಯ ಕೋಟೆಚಾ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ ಹೇಳಿದರು.


ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ ಅಭಿನಂದನಾ ಕಾರ್ಯಕ್ರಮದಲ್ಲಿ ಮೂಡಬಿದ್ರೆ ಆಳ್ವಾಸ್ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ| ಮೋಹನ್ ಆಳ್ವ ಅವರು ಅಭಿನಂದನಾ ಭಾಷಣ ಮಾಡಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸ್ಥಾಪಕ ಅಧ್ಯಕ್ಷ ವಸಂತ ಸಾಲಿಯಾನ್, ಶ್ರೀ ಕ್ಷೇ.ಧ.ಗ್ರಾ.ಯೋ ಬಿ.ಸಿ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಜನಜಾಗೃತಿ ವೇದಿಕೆ ಬೆಳ್ತಂಗಡಿ ಇದರ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಉಡುಪಿ ಶ್ರೀ ಕ್ಷೇ.ಧ.ಗ್ರಾ.ಯೋ ಬಿ.ಸಿ ಟ್ರಸ್ಟ್‌ನ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ ಗೌರವ ಉಪಸ್ಥಿತಿಯಲ್ಲಿರುತ್ತಾರೆ ಎಂದವರು ಹೇಳಿದರು.


ಡಾ| ಎಲ್.ಎಚ್ ಮಂಜುನಾಥ್ ಅವರು ವೃತ್ತಿಯಲ್ಲಿ ಪಶುವೈದ್ಯದಲ್ಲಿ ಸ್ನಾತಕೋತರ ಪದವಿಯನ್ನು ಪಡೆದು ಹೈನುಗಾರರಿಗೆ ಮಾಹಿತಿ ಮಾರ್ಗದರ್ಶನ ಲೇಖನಗಳಿಂದ ಪರಿಚಿತರಾಗಿ ಮಣಿಪಾಲದ ಟಿ.ಎಪೈ ಗ್ರಾಮಾಭಿವೃದ್ಧಿ ಸಂಸ್ಥೆಯ ಪ್ರಥಮ ನಿರ್ದೇಶಕರಾಗಿ ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ ಕೇಂದ್ರ ಉಜಿರೆ ಮತ್ತು ಶಿವಳ್ಳಿ ಸಂಸ್ಥೆಗಳ ನಿರ್ದೇಶಕರಾಗಿ ಸಿಂಡಿಕೇಟ್ ಬ್ಯಾಂಕ್‌ನ ಅಧಿಕಾರಿಯಾಗಿ 2001ರಲ್ಲಿ ಬ್ಯಾಂಕ್‌ನಿಂದ ಸ್ವಯಂ ನಿವೃತ್ತಿ ಪಡೆದು ಶ್ರೀ.ಕ್ಷೇ.ಧ.ಗ್ರಾ.ಯೋ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಮಂಜುನಾಥ ಸ್ವಾಮಿಯ ಕೃಪೆ ಮತ್ತು ಡಾ. ಡಿ.ವೀರೇಂದ್ರ ಹೆಗ್ಗಡೆ ದಂಪತಿ ಆಶೀರ್ವಾದೊಂದಿಗೆ ಗ್ರಾಮಾಭಿವೃದ್ಧಿ ಯೋಜನೆಯನ್ನು ಪ್ರವೇಶ ಮಾಡಿದ್ದರು. ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಗ್ರಾಮಾಭಿವೃದ್ಧಿಯ ಕನಸನ್ನು ಸಾಕಾರಗೊಳಿಸುವಲ್ಲಿ ಶ್ರಮಿಸಿ ಅವರ ಸಂತೃಪ್ತಿಯ ಅಧಿಕಾರಿಯಾಗಿದ್ದರು ಎಂದು ಪದ್ಮನಾಭ ಶೆಟ್ಟಿ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಜನಜಾಗೃತಿ ವೇದಿಕೆ ಪುತ್ತೂರು ತಾಲೂಕು ಅಧ್ಯಕ್ಷ ಲೋಕೇಶ್ ಹೆಗ್ಡೆ, ಕಡಬ ತಾಲೂಕು ಅಧ್ಯಕ್ಷ ಮಹೇಶ್ ಕೆ.ಸವಣೂರು, ವಲಯ ಅಧ್ಯಕ್ಷ ಸತೀಶ್ ನಾಯ್ಕ್, ಜಿಲ್ಲಾ ನಿರ್ದೇಶಕ ಪ್ರವೀಣ್, ಪುತ್ತೂರು ಯೋಜನಾಧಿಕಾರಿ ಶಶಿಧರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here