ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ಪುತ್ತೂರು ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ‘ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆ 2024 – 25’ ಸ್ಪರ್ಧೆಯು ಆಗಸ್ಟ್ 2 ರಂದು ಪುತ್ತೂರಿನ ಡಾ. ಶಿವರಾಮ ಕಾರಂತ ಬಾಲವನ ಈಜುಕೊಳದಲ್ಲಿ ನಡೆಯಿತು.
ಸ್ಪರ್ಧೆಯ ಉದ್ಘಾಟನೆಯನ್ನು ನೆರವೇರಿಸಿದ ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ರೆ.ಫಾ.ಲಾರೆನ್ಸ್ ಮಸ್ಕರೇನಸ್ ಮಾತನಾಡಿ ಕಾಲೇಜಿನ ಪಠ್ಯದ ಜೊತೆಗೆ, ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ವಿದ್ಯಾರ್ಥಿಗಳು ತಮ್ಮ ಸರ್ವತೋಮುಖ ಅಭಿವೃದ್ಧಿಯತ್ತ ಗಮನಹರಿಸಬೇಕು. ನಾವು ಸಂತ ಫಿಲೋಮಿನಾ ಪ ಪೂ ಕಾಲೇಜಿನ ಆಶ್ರಯದಲ್ಲಿ ಈ ಈಜು ಸ್ಪರ್ಧೆಯನ್ನು ಆಯೋಜಿಸಲು ಸಂತೋಷಪಡುತ್ತೇವೆ ಎಂದು ಜಿಲ್ಲೆಯ ವಿವಿಧ ಪ ಪೂ ಕಾಲೇಜುಗಳಿಂದ ಬಂದಿರುವ ಈಜು ಪಟುಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಪುತ್ತೂರಿನ ಪ್ರಸಿದ್ಧ ದಂತ ವೈದ್ಯ ಡಾ. ಶ್ರೀ ಪ್ರಕಾಶ್ ಬಿ ಮಾತನಾಡಿ ಬಾಲವನದ ಈಜುಕೊಳದಲ್ಲಿ ಆರಂಭವಾದ ನಿಮ್ಮ ಸಾಧನೆಯ ಹಾದಿ ಅಂತರಾಷ್ಟ್ರೀಯ ಮಟ್ಟದ ತನಕ ತಲುಪಲಿ ಎಂದು ಆಶಿಸುತ್ತ, ಈಜು ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಡಿ.ಕೋಸ್ಟ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರತಿಮಾ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದು, ಸ್ಪರ್ಧಾಳುಗಳಿಗೆ ಶುಭ ಕೋರಿದರು.
ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 14 ಪ ಪೂ ಕಾಲೇಜಿನ ತಂಡವು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಜಿಲ್ಲೆಯ ವಿವಿಧ ಕಾಲೇಜಿನ ದೈಹಿಕ ಶಿಕ್ಷಕರು, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಏಲಿಯಾಸ್ ಪಿಂಟೋ, ರಾಜೇಶ್ ಮೂಲ್ಯ, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಮಂಗಳೂರಿನ ಸಂತ ಅಲೋಷಿಯಸ್ ಪ ಪೂ ಕಾಲೇಜಿನ ವಿದ್ಯಾರ್ಥಿಗಳು ಪಡೆದುಕೊಂಡರೆ, ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪುತ್ತೂರಿನ ಸಂತ ಫಿಲೋಮಿನಾ ಪ ಪೂ ಕಾಲೇಜಿನ ವಿದ್ಯಾರ್ಥಿಗಳು ಪಡೆದುಕೊಂಡರು.
ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ಕಾಲೇಜಿನ ಪ್ರಾಂಶುಪಾಲ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ಅತಿಥಿಗಳನ್ನು ಸ್ವಾಗತಿಸಿ, ಉಪನ್ಯಾಸಕ ಡಾ.ಆಶಾ ಸಾವಿತ್ರಿ ವಂದಿಸಿ,ಕಾರ್ಯಕ್ರಮವನ್ನು ನಿರೂಪಿಸಿದರು.