ಪುತ್ತೂರು: ರಾಷ್ಟ್ರೀಯ ಗ್ರಂಥಪಾಲಕರ ದಿನದ ಅಂಗವಾಗಿ, ಕರ್ನಾಟಕ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯೋಜಿಸಿದ್ದ ರಾಜ್ಯಮಟ್ಟದ ಗ್ರಂಥಪಾಲಕರ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಿತು.
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ (ಪುತ್ತೂರು) ನಡುವಿನ ಮೂರು ವರ್ಷದ ಒಡಂಬಡಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸ್ತಾಂತರಿಸಿದರು. ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಶ್ರೀಶ್ ಬೈಪದವು ಅವರು ಒಡಂಬಡಿಕೆಯ ಪ್ರತಿಯನ್ನು ಸ್ವೀಕರಿಸಿದರು.
ಈ ಒಡಂಬಡಿಕೆಯನ್ವಯ, ಮೂರು ವರ್ಷಗಳ ಕಾಲ ಗ್ರಾಮ ಪಂಚಾಯತ್‌ಗಳ ಅರಿವು ಕೇಂದ್ರಗಳಲ್ಲಿ ’ಗ್ರಂಥ ಮಿತ್ರ’ ಎಂಬ ಕಾರ್ಯಕ್ರಮದಡಿ ಪ್ರತಿ ಶನಿವಾರದಂದು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕಾಲೇಜು ಸ್ವಯಂಸೇವಕರು ತರಬೇತಿಗಳನ್ನು ನೀಡಲಿದ್ದಾರೆ. ಈ ಮೂಲಕ ಮಕ್ಕಳ ಶೈಕ್ಷಣಿಕ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸಲಾಗುತ್ತದೆ. 2021ರಲ್ಲಿ ಆರಂಭವಾದ ಈ ಕಾರ್ಯಕ್ರಮವು, ಈಗಾಗಲೇ ಮೂರು ಜಿಲ್ಲೆಗಳ 100ಕ್ಕೂ ಹೆಚ್ಚು ಅರಿವು ಕೇಂದ್ರಗಳಲ್ಲಿ ನಿರ್ವಹಣೆಯಲ್ಲಿದ್ದು, ಸುಮಾರು 2000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 700ಕ್ಕೂ ಹೆಚ್ಚು ಸ್ವಯಂಸೇವಕರು ಭಾಗವಹಿಸಿದ್ದಾರೆ.
ಈ ಸಮಾರಂಭದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಉಮಾ ಮಹಾದೇವನ್, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಮತ್ತು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತೆ ಡಾ. ಅರುಂಧತಿ ಚಂದ್ರಶೇಖರ್ ಉಪಸ್ಥಿತರಿದ್ದರು.