ಬೆಂಗಳೂರಿನಿಂದ ಮಂಗಳೂರಿಗೆ ಮಾದಕ ವಸ್ತು ಸಾಗಿಸ್ತಿದ್ದ ಮೂವರು ಮಂಗಳೂರು CCB ಪೊಲೀಸರ ಬಲೆಗೆ!

0

ಆರೋಪಿ ಮೊಹಮ್ಮದ್ ನಿಶಾದ್ ವಿರುದ್ಧ ಪುತ್ತೂರು ಠಾಣೆಯಲ್ಲೂ ದಾಖಲಾಗಿದೆ ಕಳವು ಪ್ರಕರಣ!

ಮಂಗಳೂರು: ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎನ್ನು ಸಾಗಾಸಿ ಮಾರಾಟ ಮಾಡುತ್ತಿದ್ದ ಖದೀಮರನ್ನು ಪತ್ತೆ ಹಚ್ಚಿ 42 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿ ಹೊಸ ಮಾರುತಿ ಬಲೆನೋ ಕಾರಿನಲ್ಲಿರಿಸಿಕೊಂಡು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಸುರತ್ಕಲ್ ಎನ್ಐಟಿಕೆ ಮುಕ್ಕ ಪರಿಸರದಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆ ಹಚ್ಚಿ ಕಾರಿನಲ್ಲಿದ್ದ, ಕಾಸರಗೋಡು ಜಿಲ್ಲೆಯ ಕಳನಾಡಿನ ಶಾಜಹಾನ್‌ ಪಿ.ಎಂ. (32), ಅಡೂರು ನಿವಾಸಿಯಾಗಿದ್ದು ಪ್ರಸ್ತುತ ಬೆಂಗಳೂರಿನ ಕೋರಮಂಗಲದಲ್ಲಿ ವಾಸವಾಗಿರುವ ಮೊಹಮ್ಮದ್‌ ನಿಶಾದ್‌ (27) ಹಾಗೂ ಮಡಿಕೇರಿ ಮೂಲದ, ಪ್ರಸ್ತುತ ಬೆಂಗಳೂರಿನ ಮಡಿವಾಳದಲ್ಲಿ ವಾಸವಾಗಿರುವ ಮನ್ಸೂರ್‌ ಎಂ.ಎಂ (27) ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರಿಂದ ರೂ. 2,10,000 ಮೌಲ್ಯದ 42 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 5 ಮೊಬೈಲ್ ಫೋನ್ ಗಳು, ಹೊಸ ಮಾರುತಿ ಬಲೆನೋ ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 12,18,500 ಎಂದು ಅಂದಾಜಿಲಾಗಿದ್ದು ಘಟನೆಗೆ ಸಂಬಂಧಿಸಿದಂತೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಗಳು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಹೊಸ ಕಾರನ್ನು ಬಾಡಿಗೆಗೆ ಪಡೆದು ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿ ಕರ್ನಾಟಕ, ಕೇರಳ ರಾಜ್ಯದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

ಆರೋಪಿಗಳ ಪೈಕಿ ಶಾಜಹಾನ್ ಎಂಬಾತನ ವಿರುದ್ಧ ಈ ಹಿಂದೆ ಕಾಸರಗೋಡು ಜಿಲ್ಲೆ ಮೇಲ್ಪರಂಬ, ಬೇಕಲಂ, ವಿದ್ಯಾನಗರ, ಕುಂಬಳೆ, ಕಾಸರಗೋಡು ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತು ಮಾರಾಟ/ಸೇವನೆಗೆ ಸಂಬಂಧಪಟ್ಟಂತೆ ಒಟ್ಟು 7 ಪ್ರಕರಣ ದಾಖಲಾಗಿರುತ್ತದೆ. ಇನ್ನೋರ್ವ ಆರೋಪಿ ಮೊಹಮ್ಮದ್ ನಿಶಾದ್ ಎಂಬಾತನ ವಿರುದ್ಧ ಪುತ್ತೂರು ನಗರ ಹಾಗೂ ಮಡಿಕೇರಿ ಪೊಲೀಸ್ ಠಾಣೆಯಲ್ಲಿ 2 ದ್ವಿಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ.

ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಅವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ನರೇಂದ್ರ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here