ನೆಲ್ಯಾಡಿ: ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಸೆ.23ರಂದು ಸಂಜೆ ನಡೆದಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ನಡುವೆ ಗುಂಡ್ಯ ಸಮೀಪ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು, ಟ್ಯಾಂಕರ್ ಹಾಗೂ ಬಸ್ ಚಾಲಕ ಸಹಿತ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವುದಾಗಿ ವರದಿಯಾಗಿದೆ. ಈ ಪೈಕಿ ಗಂಭೀರ ಗಾಯಗೊಂಡಿರುವ ಟ್ಯಾಂಕರ್ ಚಾಲಕ, ಬಸ್ಸಿನಲ್ಲಿದ್ದ ಮಹಿಳೆ ಸಹಿತ ಇಬ್ಬರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು ಇವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬಸ್ ಚಾಲಕ ಹಾಗೂ ನಿರ್ವಾಹಕನನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಉಳಿದಂತೆ ಸಣ್ಣಪುಟ್ಟ ಗಾಯಗೊಂಡ ಹಲವು ಪ್ರಯಾಣಿಕರು ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.