ರಾಮಕುಂಜ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕ ಮತ್ತು ಶ್ರೀ ರಾಮಕುಂಜೇಶ್ವರ ವಸತಿ ಶಾಲೆಯ ಆಶ್ರಯದಲ್ಲಿ 69ನೇ ಕನ್ನಡ ರಾಜ್ಯೋತ್ಸವ ನ.1ರಂದು ರಾಮಕುಂಜ ಶ್ರೀ ರಾಮಕುಂಜೇಶ್ವರ ವಸತಿ ಶಾಲೆಯಲ್ಲಿ ನಡೆಯಿತು.
ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ಅಧ್ಯಕ್ಷರಾದ ಕೆ.ಸೇಸಪ್ಪ ರೈಯವರು ರಾಷ್ಟ್ರಧ್ವಜಾರೋಹಣಗೈದರು. ಕಡಬ ಹೋಬಳಿ ಅಧ್ಯಕ್ಷ ಪದ್ಮಪ್ಪ ಗೌಡ ಅವರು ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ಕನ್ನಡ ಮಾತೆ ಭುವನೇಶ್ವರಿಯ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡಲಾಯಿತು. ನಂತರ ನಡೆದ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಸಾಪ ಕಡಬ ತಾಲೂಕು ಘಟಕದ ಅಧ್ಯಕ್ಷ ಕೆ.ಸೇಸಪ್ಪ ರೈಯವರು, ನಮ್ಮ ಸಂಸ್ಕೃತಿ, ಕನ್ನಡ ನಾಡು ನುಡಿಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. ಕನ್ನಡದ ಕಂಪು ಎಲ್ಲೆಡೆ ಪಸರಿಸುವಂತೆ ಆಗಬೇಕೆಂದು ಹೇಳಿದರು. ಅತಿಥಿಯಾಗಿದ್ದ ಕನ್ನಡ ಸಾಹಿತ್ಯ ಪರಿಷತ್ತು ಕಡಬ ಹೋಬಳಿ ಅಧ್ಯಕ್ಷ ಪದ್ಮಪ್ಪ ಗೌಡರವರು ಮಾತನಾಡಿ, ಕನ್ನಡ ನಾಡು ನುಡಿಯ ಬೆಳವಣಿಗೆ ಹಾಗೂ ಕನ್ನಡಕ್ಕಾಗಿ ಹೋರಾಡಿದ ವೀರ ಮಹನೀಯರನ್ನು ಸ್ಮರಿಸಿ ಕನ್ನಡದ ಬೆಳವಣಿಗೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಹೇಳಿದರು. ಶ್ರೀ ರಾಮಕುಂಜೇಶ್ವರ ವಸತಿ ಶಾಲೆಯ ಆಡಳಿತಾಧಿಕಾರಿ ಆನಂದ್ ಎಸ್.ಟಿ., ಪತ್ರಕರ್ತ ಹರೀಶ್ ಬಾರಿಂಜ ಸಂದರ್ಭೋಚಿತವಾಗಿ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ಕೋಶಾಧಿಕಾರಿ ಬಾಲಚಂದ್ರ ಮುಚ್ಚಿಂತಾಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಮೇನೇಜರ್ ಪುರುಷೋತ್ತಮ, ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಲೋಹಿತ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಲಿಖಿತ್ ಗೌಡ, ಜನನಿ, ಸಹಶಿಕ್ಷಕಿ ಹರಿಣಿ ಅವರು ಕನ್ನಡ ನಾಡು ನುಡಿಯ ಮಹತ್ವದ ಬಗ್ಗೆ ಮಾತನಾಡಿದರು.
ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು ಎನ್ ಸ್ವಾಗತಿಸಿದರು. ಸಹ ಶಿಕ್ಷಕಿ ತೃಪ್ತಿ ವಂದಿಸಿದರು. ಸಹಶಿಕ್ಷಕ ಹರೀಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಎಲ್ಲಾ ಶಿಕ್ಷಕ-ಶಿಕ್ಷಕೇತರರು ಸಹಕರಿಸಿದರು. ವಿದ್ಯಾರ್ಥಿಗಳಿಂದ ಕನ್ನಡ ನಾಡು ನುಡಿ ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ವಿದ್ಯಾರ್ಥಿಗಳಿಗೆ ಸಿಹಿತಿಂಡಿ ಹಂಚಲಾಯಿತು.
ಸನ್ಮಾನ:
ಕೊಯಿಲ ಗ್ರಾಮದ ಗಂಡಿಬಾಗಿಲು ಅಂಗನವಾಡಿ ಕಾರ್ಯಕರ್ತೆ ಮೋಹಿನಿ ಯು., ಹಳೆನೇರೆಂಕಿ ಗ್ರಾಮದ ಮೇಲೂರು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಪ್ರಫುಲ್ಲರವರು ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನಿತರು ಗುರುತಿಸಿ ಸನ್ಮಾನಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು.