





ಪುತ್ತೂರು: 2 ವರ್ಷದ ಹಿಂದೆ ಪುತ್ತೂರು ದರ್ಬೆಯ ಹಿತ ಆಸ್ಪತ್ರೆಯಿಂದ ಜನರೇಟರ್ ಬ್ಯಾಟರಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಕೇರಳದ ಕೊಳ್ಳಂ ನಿವಾಸಿ ಇಟ್ಟಿ ಪಣಿಕರ್ ಬಂಧಿತ ಆರೋಪಿ. ಇಟ್ಟಿ ಪಣಿಕರ್ 2022ರ ಸೆಪ್ಟೆಂಬರ್ ತಿಂಗಳಲ್ಲಿ ಹಿತ ಆಸ್ಪತ್ರೆಯ ಜನರೇಟರ್ನ ಬ್ಯಾಟರಿ ಕಳವು ಮಾಡಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಗೆ ಜಾಮೀನು ಮಂಜೂರು ಮಾಡಿತ್ತು. ಬಳಿಕ ಆರೋಪಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ನ್ಯಾಯಾಲಯ ಆರೋಪಿ ವಿರುದ್ಧ ವಾರಂಟ್ ಜಾರಿ ಮಾಡಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಮತ್ತು ಡಿವೈಎಸ್ಪಿ ಅರುಣ್ ನಾಗೇಗೌಡ ಅವರ ನಿರ್ದೇಶನದಂತೆ ಪುತ್ತೂರು ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಜಾನ್ಸನ್ ಡಿಸೋಜ ಅವರ ಮಾರ್ಗದರ್ಶನದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೇಬಲ್ ವಸಂತ ಗೌಡ ಅವರು ಮಂಗಳೂರು ಬರ್ಕೆ ಪೊಲೀಸರ ಸಹಾಯದಿಂದ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.











