ಪುತ್ತೂರು: ನೆಹರುನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ‘ಭ್ರಷ್ಟಾಚಾರದ ವಿರುದ್ಧ ಜಾಗೃತಿ ಹಾಗೂ ಪ್ರಮಾಣ ವಿಧಿ’ ಸ್ವೀಕಾರ ಕಾರ್ಯಕ್ರಮವು ಮಹಾವಿದ್ಯಾಲಯದ ಸುಜ್ಞಾನ ದೀಪಿಕಾ ಸಭಾಂಗಣದಲ್ಲಿ ನಡೆಯಿತು.
ಭ್ರಷ್ಟಾಚಾರದ ಕುರಿತು ಜನಜಾಗೃತಿ ಮೂಡಿಸುವ ವಿಜಿಲೆನ್ಸ್ ಸಪ್ತಾಹದ ಭಾಗವಾಗಿ ಭ್ರಷ್ಟಾಚಾರದ ಕುರಿತು ಜಾಗೃತಿ ಹಾಗೂ ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ‘ಪ್ರಮಾಣ ವಿಧಿ’ ಸ್ವೀಕಾರ ಕಾರ್ಯಕ್ರಮ ನಡೆಸಲಾಯಿತು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಲಕ್ಷ್ಮೀಕಾಂತ ಎ. ಮಾತನಾಡಿ, ಭ್ರಷ್ಟಾಚಾರದ ತೀವ್ರತೆಯ ಬಗ್ಗೆ ತಿಳಿಸಿ, ಭಾರತವನ್ನು ಭ್ರಷ್ಟಾಚಾರಮುಕ್ತಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಜವಾಬ್ದಾರಿಯುತ ನಾಗರಿಕ ತನ್ನಲ್ಲಿ ನೈತಿಕತೆಯನ್ನು ಬೆಳೆಸಿಕೊಳ್ಳಬೇಕು. ಭ್ರಷ್ಟಾಚಾರ ಮಾಡಲ್ಲ ಹಾಗೂ ಭ್ರಷ್ಟಾಚಾರ ಮಾಡುವುದನ್ನು ಕಂಡರೆ ಅದನ್ನು ವಿರೋಧಿಸುವ ಪ್ರತಿಜ್ಞೆಯನ್ನು ಕೈಗೊಳ್ಳಬೇಕು ಎಂದು ಕರೆ ನೀಡಿದರು.
ವೇದಿಕೆಯಲ್ಲಿ ಕಾನೂನು ವಿಭಾಗದ ಸಹಾಯಕ ಪ್ರಾಧ್ಯಾಪಕಿ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಶ್ರೀರಕ್ಷಾ ಭ್ರಷ್ಟಾಚಾರದ ವಿರುದ್ಧದ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಬಿ.ಕೆ. ರವೀಂದ್ರ ವಹಿಸಿದ್ದರು. ವೇದಿಕೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಅಕ್ಷತಾ ಎ. ಪಿ. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕ- ರಕ್ಷಕ ಸಂಘದ ಸದಸ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.