ಅಡ್ಡಹೊಳೆ: ಸರಣಿ ಅಪಘಾತ- 20ಕ್ಕೂ ಅಧಿಕ ಮಂದಿಗೆ ಗಾಯ

0

ನೆಲ್ಯಾಡಿ: ಖಾಸಗಿ ಬಸ್, ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿ ಖಾಸಗಿ ಬಸ್ಸಿನಲ್ಲಿದ್ದ ಹಲವು ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ನ.23ರಂದು ಮುಂಜಾನೆ ಸಂಭವಿಸಿದೆ. ಘಟನೆಯಲ್ಲಿ ಖಾಸಗಿ ಬಸ್ಸಿನಲ್ಲಿದ್ದ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವುದಾಗಿ ವರದಿಯಾಗಿದೆ.


ಬೆಂಗಳೂರು ಕಾಮಾಕ್ಷಿಪಾಳ್ಯದ ಸೈಂಟ್ ಲಾರೆನ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಖಾಸಗಿ ಬಸ್ಸಿನಲ್ಲಿ ಕುಂದಾಪುರಕ್ಕೆ ಪ್ರವಾಸಕ್ಕೆ ಬಂದವರು ಮತ್ತೆ ಬೆಂಗಳೂರಿಗೆ ಹಿಂತಿರುಗುತ್ತಿದ್ದ ವೇಳೆ ಅಡ್ಡಹೊಳೆಯಲ್ಲಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದೇ ವೇಳೆ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಪಲ್ಟಿಯಾಗಿದ್ದ ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ. ಕೆಎಸ್‌ಆರ್‌ಟಿಸಿ ಬಸ್ಸಿಗೆ ಅದರ ಹಿಂಬದಿಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿ ಸರಣಿ ಅಪಘಾತ ಸಂಭವಿಸಿದೆ.


ಘಟನೆಯಲ್ಲಿ ಖಾಸಗಿ ಬಸ್ಸಿನಲ್ಲಿದ್ದ ಸುಮಾರು 32 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನೆಲ್ಯಾಡಿ ಹಾಗೂ ಕಡಬದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಗಿದೆ. ಈ ಪೈಕಿ ಗಂಭೀರ ಗಾಯಗೊಂಡಿದ್ದ 15 ವಿದ್ಯಾರ್ಥಿಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

LEAVE A REPLY

Please enter your comment!
Please enter your name here