ಠಾಣೆಗೆ ಮುತ್ತಿಗೆ ಎಚ್ಚರಿಕೆ ಹಿಂಪಡೆದ ಆದಿದ್ರಾವಿಡ ಮೊಗೇರ ಸಂಘ
ಪುತ್ತೂರು: ನ.16ಕ್ಕೆ ಮೃತಪಟ್ಟ ಶಿವಪ್ಪ ಅವರು ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹಾಗಾಗಿ ಠಾಣೆಯ ಮುಂದಿನ ನಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದು, ಪೊಲೀಸರ ಕಾರ್ಯಾಚರಣೆಗೆ ಅಭಿನಂದನೆ ಸಲ್ಲಿಸುತ್ತಿದ್ದೇವೆ ಎಂದು ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಅಧ್ಯಕ್ಷ ಬಾಬು ಮರಿಕೆ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.
ಶಿವಪ್ಪ ಅವರ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ತಡ ಮಾಡಿದಾಗ ಆದಿದ್ರಾವಿಡ ಸಮಾಜ ಸೇವಾ ಸಂಘ, ಯುವ ವೇದಿಕೆ ಸಹಿತ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಇಲಾಖೆಯ ವಿರುದ್ಧ ಪ್ರತಿಭಟನೆ ಮಾಡಿದ್ದೇವೆ. ಆ ಸಂದರ್ಭ ಠಾಣೆಗೆ ಮುತ್ತಿಗೆ ಹಾಕುವ ಎಚ್ಚರಿಕೆಯನ್ನೂ ನೀಡಿದ್ದೆವು. ಇದೀಗ ನ.24ರಂದು ಪೊಲೀಸರು ಪ್ರಮುಖ ಆರೋಪಿ ಸಹಿತ ನಾಲ್ವರನ್ನು ಬಂಧಿಸಿದ್ದಾರೆ. ಈ ನಿಟ್ಟಿನಲ್ಲಿ ಪುತ್ತೂರು ಡಿವೈಎಸ್ಪಿ, ಇನ್ಸ್ಪೆಕ್ಟರ್ ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಹಾಗು ಪುತ್ತೂರು ಸಹಾಯಕ ಕಮೀಷನರ್ಗೆ ಅಭಿನಂದನೆ ಸಲ್ಲಿಸುತ್ತಿದ್ದೇವೆ. ಅದೇ ರೀತಿ ನಮಗೆ ಬೆಂಬಲವಾಗಿ ನಿಂತ ವಿವಿಧ ಜಾತಿ ಸಂಘಟನೆ, ರಾಜಕೀಯ ಸಂಘಟನೆಗಳಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದವರು ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ನಲಿಕೆಯವರ ಸಮಾಜ ಸೇವಾ ಸಂಘದ ಬಂಟ್ವಾಳ ತಾಲೂಕು ಅಧ್ಯಕ್ಷ ರಾಮಣ್ಣ ಪಿಲಿಂಜ, ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕ ಅಧ್ಯಕ್ಷ ಶೇಷಪ್ಪ ಬೆದ್ರಕಾಡು, ಪುತ್ತೂರು ಮೊಗೇರ ಸಂಘದ ಪ್ರಧಾನ ಕಾರ್ಯದರ್ಶಿ ಮುಕೇಶ್ ಕೆಮ್ಮಿಂಜೆ, ದಲಿತ್ ಸೇವಾ ಸಮಿತಿ ತಾಲೂಕು ಅಧ್ಯಕ್ಷ ಅಣ್ಣಪ್ಪ ಕಾರೆಕ್ಕಾಡು, ಉಪಾಧ್ಯಕ್ಷ ಕೃಷ್ಣಪ್ಪ ನಾಯ್ಕ ನರಿಮೊಗರು ಉಪಸ್ಥಿತರಿದ್ದರು.