ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಇಬ್ಬರು ವಿದ್ಯಾರ್ಥಿಗಳು ಅಂತರ್ ವಿಶ್ವವಿದ್ಯಾನಿಲಯ ಕ್ರೀಡಾಕೂಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸುವುದಕ್ಕೆ ಆಯ್ಕೆಯಾಗಿದ್ದಾರೆ.
ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ವರ್ಷಿತಾ.ಪಿ.ಆಳ್ವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಕಬಡ್ಡಿ ತಂಡಕ್ಕೆ ಆಯ್ಕೆಗೊಂಡಿದ್ದಾರೆ. ತಮಿಳ್ನಾಡಿನ ಕಾರೈಕುಡಿಯ ಅಳಗಪ್ಪ ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ನವೆಂಬರ್ 29 ರಿಂದ ಡಿಸೆಂಬರ್ 2 ರ ವರೆಗೆ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಪಂದ್ಯಾಟದಲ್ಲಿ ಇವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುತ್ತಾರೆ.
ಪುರುಷರ ವಿಭಾಗದ ಭಾರ ಎತ್ತುವ ತಂಡಕ್ಕೆ ಕಾಲೇಜಿನ ದ್ವಿತೀಯ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಭುವನ್‌ರಾಮ್ ಭಂಡಾರಿ ಆಯ್ಕೆಯಾಗಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ನಾಗಾರ್ಜುನ ನಗರದ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನವೆಂಬರ್ 30 ರಿಂದ ಡಿಸೆಂಬರ್ 3 ರ ವರೆಗೆ ನಡೆಯುವ ನೈರುತ್ಯ ವಿಭಾಗದ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ ಇವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.