ಶಿಕ್ಷಣದಿಂದ ಸುಶಿಕ್ಷಿತ, ಸುಸಂಸ್ಕೃತ ಸಮಾಜ ನಿರ್ಮಾಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ರಾಮಕುಂಜ: ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ 2024-25ನೇ ಸಾಲಿನ ವಾರ್ಷಿಕೋತ್ಸವ ನ.27ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಸಂಜೆ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಗಳ ಅಧ್ಯಕ್ಷರೂ ಆದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು, ವಿದ್ಯಾರ್ಥಿಗಳು ಚೆನ್ನಾಗಿ ಅಧ್ಯಯನ ಮಾಡಿ ಸಮಾಜವನ್ನು ಕಟ್ಟುವ, ಬೆಳೆಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು. ನಗರ ಪ್ರದೇಶದ ಶಿಕ್ಷಣ ಸಂಸ್ಥೆಗಳು ಶೇ.99 ಅಂಕ ಪಡೆದವರನ್ನು ಮಾತ್ರ ದಾಖಲಾತಿ ಮಾಡಿಕೊಳ್ಳುತ್ತವೆ. ಆದರೆ ಗ್ರಾಮೀಣ ಪ್ರದೇಶದಲ್ಲಿರುವ ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಗಳು ವಿದ್ಯೆ ಬಯಸಿ ಬರುವ ಎಲ್ಲರನ್ನೂ ದಾಖಲಾತಿ ಮಾಡಿಕೊಂಡು ಅವರು ಉತ್ತಮ ಅಂಕಗಳಿಸುವುದರೊಂದಿಗೆ ಸತ್ಪ್ರಜೆಯನ್ನಾಗಿ ರೂಪಿಸುತ್ತಿವೆ. ಇಲ್ಲಿನ ಶಿಕ್ಷಣ ಸಂಸ್ಥೆಗಳು ಹಣ ಸಂಪಾದನೆಯ ಉದ್ದೇಶ ಹೊಂದಿಲ್ಲ. ಸುಶಿಕ್ಷಿತ, ಸುಸಂಸ್ಕೃತ ಸಮಾಜ ನಿರ್ಮಾಣದ ಉದ್ದೇಶವಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿವೆ. ವಿದ್ಯಾರ್ಥಿಗಳೂ ಪರಿಶ್ರಮ ಪಡಬೇಕು ಎಂದು ನುಡಿದರು.
ಮುಖ್ಯ ಅತಿಥಿಯಾಗಿದ್ದ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಅವರು ಮಾತನಾಡಿ, ವಿದ್ಯಾರ್ಥಿಗಳು ದಾರಿ ತಪ್ಪುವ ಕೆಲಸ ಮಾಡಬಾರದು. ಹೆತ್ತವರಿಗೆ ಎಂದಿಗೂ ನೋವು ತರುವ ಕೆಲಸ ಮಾಡಬಾರದು. ಡ್ರಗ್ಸ್, ಮಾದಕ ವ್ಯಸನಿಗಳಾಗಬಾರದು ಎಂದು ಹೇಳಿದ ಅವರು ವಿಧಾನ ಪರಿಷತ್ ಸದಸ್ಯನಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಕೊಡಿಸುವ ಕೆಲಸ ಮಾಡುವುದಾಗಿ ಹೇಳಿದರು. ಇನ್ನೋರ್ವ ಅತಿಥಿ ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ವಿಶ್ರಾಂತ ಮುಖ್ಯಸ್ಥರೂ, ಕನಕ ಗೌರವ ಪ್ರಶಸ್ತಿ ಪುರಸ್ಕೃತರೂ ಆದ ಡಾ. ವಸಂತ ಕುಮಾರ್ ತಾಳ್ತಜೆ ಅವರು ಮಾತನಾಡಿ, ವಿದ್ಯಾರ್ಥಿಗಳು ಸವಾಲುಗಳನ್ನು ಎದುರಿಸಿಕೊಂಡು ಸಮಾಜಕ್ಕೆ ದೊಡ್ಡ ಕೊಡುಗೆ ನೀಡುವವರಾಗಬೇಕೆಂದು ಹೇಳಿದರು. ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಾದ ಪ್ರಗತಿಪರ ಕೃಷಿಕ ಉದಯಶಂಕರ ಭಟ್ ಬಲ್ಲಾಳಿಕೆ, ಬೆಂಗಳೂರಿನ ಮಹೇಶ್ ಬೀರಂತಡ್ಕ ಮತ್ತು ಕೋ ಚಾರ್ಟರ್ಡ್ ಅಕೌಂಟೆಂಟ್ಸ್ ಕಂಪನಿಯ ಮಹೇಶ್‌ಕುಮಾರ್ ಬಿ., ಚಿಕ್ಕಮಗಳೂರು ಕೈಮರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿರುವ ಡಾ.ಪ್ರತ್ಯಕ್ಷ ಭೈರವ, ಇಂಜಿನಿಯರಿಂಗ್ ಇಂಟ್ಯೂಟ್‌ನ ನಿರ್ದೇಶಕ ಸುದತ್ತ ಗೌತಮ್ ಅವರು ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು.
ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಸಂಚಾಲಕ ಟಿ.ನಾರಾಯಣ ಭಟ್, ಕೋಶಾಧಿಕಾರಿ ಕೆ.ಸೇಸಪ್ಪ ರೈ, ಸದಸ್ಯರಾದ ಲಕ್ಷ್ಮೀ ನಾರಾಯಣ ರಾವ್ ಆತೂರು, ಮಾಧವ ಆಚಾರ್ಯ ಇಜ್ಜಾವು, ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನ ಪ್ರಾಂಶುಪಾಲ ಗಣರಾಜ್ ಕುಂಬ್ಳೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಶೋಕ್ ಕೊಯಿಲ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಉಮೇಶ್, ಶಾಲಾ ವಿದ್ಯಾರ್ಥಿ ಸಂಘದ ನಾಯಕರಾದ ಅನಿರುದ್ಧ್, ಪೃಥ್ವಿರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್., ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಂಶುಪಾಲ ಚಂದ್ರಶೇಖರ ಕೆ., ಮುಖ್ಯ ಶಿಕ್ಷಕ ಸತೀಶ್ ಭಟ್ ವರದಿ ವಾಚಿಸಿದರು. ಪ್ರಾಂಶುಪಾಲ ಚಂದ್ರಶೇಖರ ಕೆ., ಸ್ವಾಗತಿಸಿ, ಉಪನ್ಯಾಸಕ ನವೀನ್ ಕೊರೆಯ ವಂದಿಸಿದರು. ಉಪನ್ಯಾಸಕ ಗುಡ್ಡಪ್ಪ ಬಲ್ಯ ನಿರೂಪಿಸಿದರು. ತೃಷಾ ರೈ ಮತ್ತು ತಂಡದವರು ಪ್ರಾರ್ಥಿಸಿದರು. ಬೆಳಿಗ್ಗೆ ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಸನ್ಮಾನ:
ಸಂಸ್ಥೆಯ ನಿವೃತ್ತ ಶಿಕ್ಷಕ ಮನಮೋಹನ್ ರೈ ಹಾಗೂ ಅನುದಾನ ರಹಿತ ಶಾಲೆಗಳ ಸಂಘದಿಂದ ನೀಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಶಿಕ್ಷಕಿ ಸರಿತಾ ಅವರನ್ನು ಸಂಸ್ಥೆಯ ಪರವಾಗಿ ಸ್ವಾಮೀಜಿ ಸನ್ಮಾನಿಸಿ ಗೌರವಿಸಿದರು. ಸರಿತಾ ಅವರು ಸನ್ಮಾನಕ್ಕೆ ಕೃತಜ್ಞತೆ ಸೂಚಿಸಿ ಮಾತನಾಡಿದರು. ಕಡಬ ವಿಜಿತ್ ಸೌಂಡ್ಸ್ ಮಾಲಕ ವಿಜಿತ್ ಶೆಟ್ಟಿ, ಎಸ್‌ಆರ್‌ಕೆ ಲ್ಯಾಡರ‍್ಸ್‌ನ ಕೇಶವ ಅಮೈ, ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಧರ್ಮಪಾಲ ರಾವ್ ಅವರನ್ನು ಗೌರವಿಸಲಾಯಿತು.
ಗೌರವಾರ್ಪಣೆ:
ಅತಿಥಿಗಳಿಗೆ ಹಾಗೂ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಮಾಡಲಾಯಿತು. ಶೈಕ್ಷಣಿಕ ಸಾಧನೆ ಮಾಡಿದ ಪ್ರೌಢಶಾಲೆ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನು, ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸಾಧಕ ಹಿರಿಯ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಉಪನ್ಯಾಸಕರಾದ ಚೇತನ್ ಎಂ., ತಾರಾನಾಥ, ಶಿಕ್ಷಕಿ ಉಷಾಕುಮಾರಿ, ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ, ದೈಹಿಕ ಶಿಕ್ಷಣ ನಿರ್ದೇಶಕ ಗಣೇಶ್ ಕೆ., ಈ ಕಾರ್ಯಕ್ರಮ ನಿರ್ವಹಿಸಿದರು.