ಪುತ್ತೂರು: ಪೆಂಗಲ್ ಚಂಡಮಾರುತದಿಂದಾಗಿ ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಡಿ.3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ದ.ಕ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧೀಕಾರದ ಅಧ್ಯಕ್ಷರಾಗಿರುವ ಮುಲ್ಲೈಮಗಿಲನ್ ಆದೇಶಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತ ಪರಿಣಾಮದಿಂದ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಸಲಾಗಿದೆ. ದುರ್ಬಲ ಅಥವಾ ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ, ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸಬೇಕು. ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ, ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು. ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆ 24*7 ಕಂಟ್ರೋಲ್ ರೂಂ 1077 ಅಥವಾ 0824-2442590 ಸಂಪರ್ಕಿಸುವುದು. ಆಯಾ ತಾಲೂಕು ಕೇಂದ್ರಗಳಲ್ಲಿ ಮಂಗಳೂರು 0824-2220587, ಉಳ್ಳಾಲ 0824-2204424, ಬಂಟ್ವಾಳ 08255-232500, ಪುತ್ತೂರು08251-230349, ಬೆಳ್ತಂಗಡಿ 08256-232047, ಕಡಬ 08251-260435, ಸುಳ್ಯ 08257-231231, ಮೂಡಬಿದ್ರೆ 08258-238100, ಮುಲ್ಕಿ 0824-2294496 ದೂರವಾಣಿ ನಂಬರ್ಗೆ ಕರೆಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.