ಕಸ್ತೂರಿರಂಗನ್ ವರದಿ ಜಾರಿ ವಿರೋಧಿಸಿ ಗುಂಡ್ಯದಲ್ಲಿ ಪ್ರತಿಭಟನೆ ಸಂದರ್ಭ ಹೆದ್ದಾರಿಯಲ್ಲಿ ರಸ್ತೆ ತಡೆ: ಶಾಸಕರಿಬ್ಬರ ಸಹಿತ 15 ಮಂದಿ ವಿರುದ್ಧದ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ

0

ಕಡಬ:ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನ.15ರಂದು ಗುಂಡ್ಯದಲ್ಲಿ ನಡೆದ ಪ್ರತಿಭಟನೆಯ ಸಂದರ್ಭ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಸಾರ್ವಜನಿಕರ ಹಾಗೂ ವಾಹನ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದ ಆರೋಪದಲ್ಲಿ ಶಾಸಕರಿಬ್ಬರ ಸಹಿತ 15 ಮಂದಿ ವಿರುದ್ಧ ಉಪ್ಪಿನಂಗಡಿ ಪೊಲೀಸರು ದಾಖಲಿಸಿಕೊಂಡಿದ್ದ ಕ್ರಿಮಿನಲ್ ಮೊಕದ್ದಮೆಯ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.


ಕಸ್ತೂರಿರಂಗನ್ ವರದಿ ಜಾರಿ ವಿರೋಧಿಸಿ ಸಿರಿಬಾಗಿಲು ಗ್ರಾಮದ ಲಕ್ಷ್ಮೀವೆಂಕಟೇಶ್ ದೇವಸ್ಥಾನದ ಮಾಡ ಮೈದಾನದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ನ.15ರಂದು ಪ್ರತಿಭಟನಾ ಸಭೆ ನಡೆದಿತ್ತು.ಸ್ಥಳಕ್ಕೆ ಪುತ್ತೂರು ಸಹಾಯಕ ಕಮಿಷನರ್ ಆಗಮಿಸಲು ತಡವಾಯಿತೆಂದು ಪ್ರತಿಭಟನಾ ಸಭೆಯಲ್ಲಿದ್ದವರು ಬಳಿಕ ಪ್ರತಿಭಟನಾ ಸ್ಥಳದಿಂದ ಸುಮಾರು 1 ಕಿ.ಮೀ.ದೂರದ ರಾಷ್ಟ್ರೀಯ ಹೆದ್ದಾರಿ 75ರ, ಕಡಬ ತಾಲೂಕು ಶಿರಾಡಿ ಗ್ರಾಮದ ಗುಂಡ್ಯ ಪೇಟೆಗೆ ಬಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯರವರ ನೇತೃತ್ವದಲ್ಲಿ ಮಧ್ಯಾಹ್ನ 2.30ರಿಂದ ಹೆದ್ದಾರಿ ತಡೆ ನಡೆಸಿದ್ದರು.


15 ಜನರ ವಿರುದ್ಧ ಕೇಸು:
ಪ್ರತಿಭಟನೆ ಸಂದರ್ಭ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ಮಾಡಿ ಸಾರ್ವಜನಿಕರ ಹಾಗೂ ವಾಹನ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದ ಆರೋಪದಲ್ಲಿ, ರಸ್ತೆ ತಡೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ, ಮಾಜಿ ಜಿಲ್ಲಾ ಪರಿಷತ್ ಸದಸ್ಯ ಸಯ್ಯದ್ ಮೀರಾ ಸಾಹೇಬ್, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಽರ್ ಕುಮಾರ್ ಶೆಟ್ಟಿ, ನವೀನ್ ನೆರಿಯಾ, ಸತೀಶ್ ಶೆಟ್ಟಿ ಬೀರುಕ್ಕು ಬಲ್ಯ, ಉಮೇಶ್ ಸಾಯಿರಾಮ್, ವೆಂಕಟ್ ವಳಲಂಬೆ, ಪ್ರಕಾಶ್ ಗುಂಡ್ಯ, ಪ್ರಸಾದ್ ನೆಟ್ಟಣ,ಉಮೇಶ್ ಬಲ್ಯ,ನವೀನ್ ರೆಖ್ಯಾ, ಯತೀಶ್ ಗುಂಡ್ಯ, ಗಣೇಶ್ ಎಂಬವರ ವಿರುದ್ಧ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.ಅಕ್ರಮಕೂಟ ಸೇರಿಕೊಂಡು ಅಕ್ರಮ ರಸ್ತೆ ತಡೆ ಮಾಡಿ ಪ್ರತಿಭಟನೆಯನ್ನು ಮಾಡಿದ್ದಾರೆ.ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ಮಾಡದಂತೆ ಹಾಗೂ ಸಾರ್ವಜನಿಕ ರಸ್ತೆಗೆ ಅಡ್ಡಿಪಡಿಸದಂತೆ ತಿಳಿಸಿದರೂ ಇವರುಗಳು ಕೇಳದೆ ಪ್ರತಿಭಟನೆಯನ್ನು ಮುಂದುವರಿಸಿ ಕಸ್ತೂರಿರಂಗನ್ ವರದಿ ವಿರೋಧಿಸಿ ಸರ್ಕಾರ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳ ವಿರುದ್ದ ಘೋಷಣೆ ಕೂಗಿದ್ದಾರೆ.ಈ ರೀತಿ ಅಕ್ರಮ ಕೂಟ ಸೇರಿಕೊಂಡು ರಸ್ತೆತಡೆ ಮಾಡಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುತ್ತಿರುವುದು ಕಾನೂನು ಬಾಹಿರ ಎಂದು ತಿಳಿಸಿದರೂ ಗಣನೆಗೆ ತೆಗೆದುಕೊಳ್ಳದೆ ಮಧ್ಯಾಹ್ನ 3.30 ಗಂಟೆಯ ತನಕ ರಸ್ತೆತಡೆ ಮಾಡಿ ಸಾರ್ಜಜನಿಕರ ಮತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟು ಮಾಡಿರುತ್ತಾರೆ ಎಂದು ಆರೋಪಿಸಿ ಉಪ್ಪಿನಂಗಡಿ ಪಿಎಸ್‌ಐ ಅವಿನಾಶ್ ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ,ಕಲಂ 189(2)126(2),285 ಜೊತೆಗೆ 190 ಬಿಎನ್‌ಎಸ್ 2023 ಕಾಯ್ದೆಯಡಿ ಪ್ರಕರಣ(ಅ.ಕ್ರ.121/2024) ದಾಖಲಾಗಿತ್ತು.


ಹೈಕೋರ್ಟ್‌ಗೆ ಮೊರೆ:
ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ತಡೆಯಾಜ್ಞೆ ನೀಡುವಂತೆ ಆರೋಪಿಗಳು ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಪ್ರಕರಣದ ಮುಂದಿನ ವಿಚಾರಣೆಗೆ ತಡೆಯಾಜ್ಞೆ ನೀಡಿದ್ದಾರೆ.ಅರ್ಜಿದಾರರ ಪರವಾಗಿ ಹೈಕೋರ್ಟ್ ನ್ಯಾಯವಾದಿಗಳಾದ ಕರುಣಾಕರ ಪಾಂಬೆಲು, ಪ್ರದೀಪ್ ಬೊಳ್ಳೂರು,ಶ್ರೀಕಾಂತ್ ಆಚಳ್ಳಿ,ಆದರ್ಶ ಗೌಡ ಕಟ್ಟರವರು ವಾದಿಸಿದ್ದರು.


13 ಮಂದಿಗೆ ಜಾಮೀನು ಮಂಜೂರಾಗಿತ್ತು:
ಈ ಪ್ರಕರಣದಲ್ಲಿ ಶಾಸಕರಿಬ್ಬರ ಹೊರತು ಇತರ ಹದಿಮೂರು ಆರೋಪಿಗಳಿಗೆ ಈಗಾಗಲೇ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.ಇದೀಗ,ಪ್ರಕರಣದ ಮುಂದಿನ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

LEAVE A REPLY

Please enter your comment!
Please enter your name here