ಕಾಂಗ್ರೆಸ್ ಸರಕಾರ ಸಂಘ ಪರಿವಾರದ ಕೈಗೊಂಬೆ: ಅಬ್ದುಲ್ ಮಜೀದ್
ಉಪ್ಪಿನಂಗಡಿ: ರಾಜ್ಯದಲ್ಲಿ ಸರಕಾರ ನಡೆಸುತ್ತಿರುವ ಕಾಂಗ್ರೆಸ್ ಪಕ್ಷವು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಬಹುಪಾಲು ಮತಗಳನ್ನು ಪಡೆದು ಅಧಿಕಾರಕ್ಕೆ ಬಂದಿದೆ. ಆದರೆ ಆಡಳಿತ ಸಿಕ್ಕಿದ ಮೇಲೆ ಸಮುದಾಯವನ್ನು ಮರೆತು ಸಂಘ ಪರಿವಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎಂದು ಎಸ್‌ಡಿಪಿಐ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆರೋಪಿಸಿದರು.
ಎಸ್‌ಡಿಪಿಐ ಪಕ್ಷವು ರಾಜ್ಯ ಸರಕಾರದ ವಿರುದ್ಧ ಹಮ್ಮಿಕೊಂಡ ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ – 2 ಉಪ್ಪಿನಂಗಡಿಗೆ ಆಗಮಿಸಿದಾಗ ಅಲ್ಲಿ ನಡೆದ ಸಭಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಶೋಷಿತ ವರ್ಗದ ಜನರಲ್ಲಿ ಶೇ.70 ರಷ್ಟು ಮಂದಿ ಆರ್ಥಿಕವಾಗಿ ಹಿಂದುಳಿದಿದ್ದಾರೆ. ಶೋಷಿತ ವರ್ಗಕ್ಕೆ ನ್ಯಾಯ ಸಿಗಬೇಕಾಗಿದೆ. ಪ್ರಣಾಳಿಕೆಯಲ್ಲಿ ಒಳ ಮೀಸಲಾತಿ ಜಾರಿಗೊಳಿಸುವ ಭರವಸೆ ಕಾಂಗ್ರೆಸ್ ಪಕ್ಷವು ನೀಡಿತ್ತು. ಈ ಕುರಿತು ಬೆಳಗಾವಿಯ ಸುವರ್ಣಸೌಧಕ್ಕೆ ತೆರಳಿ ಸರಕಾರಕ್ಕೆ ಬಿಸಿ ಮುಟ್ಟಿಸುವ ಕಾರ್ಯಕ್ಕೆ ಮುಂದಾಗಿರುವುದಾಗಿ ತಿಳಿಸಿದರು.
ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್. ಭಾಸ್ಕರ್ ಪ್ರಸಾದ್ ಮಾತನಾಡಿ, ರಾಜ್ಯ ಸರಕಾರ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ನಡೆಸಿದ್ದು, ಮೀಸಲಾತಿ ಸಹಿತ ನಮ್ಮ ವಿವಿಧ ಬೇಡಿಕೆ ಈಡೇರಿಸದೇ ಇದ್ದಲ್ಲಿ ಪಟ್ಟು ಬಿಡುವುದಿಲ್ಲ. ಪಂಚಮ ಸಾಲಿ ಸಮುದಾಯದ ಜನರ ಮೇಲೆ ಲಾಠಿ ಚಾರ್ಚ್ ನಡೆಸಿರುವುದು ಅಕ್ಷಮ್ಯ ಅಪರಾಧವಾಗಿದ್ದು, ಸರಕಾರದಲ್ಲಿ ಯಾವುದೇ ಶಾಸಕರು ಇರಲಿ ಆಯಾ ಸಮುದಾಯಕ್ಕೆ ಸೇರಿದ ಶಾಸಕರು ಧ್ವನಿ ಎತ್ತಿ ನ್ಯಾಯ ಒದಗಿಸಿದರೆ ಈ ರದ್ಧಾಂತಕ್ಕೆ ಅವಕಾಶವಿರುವುದಿಲ್ಲ ಎಂದರು.
ವೇದಿಕೆಯಲ್ಲಿ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಆಫ್ಸರ್ ಕೊಡ್ಲಿಪೇಟೆ, ಕೋಶಾಧಿಕಾರಿ ಅಮ್ಜದ್ ಖಾನ್, ರಾಜ್ಯ ಸಮಿತಿ ಸದಸ್ಯ ಅಬ್ದುಲ್ ಮಜೀದ್ ಖಾನ್, ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಪುತ್ತೂರು ವಿಧಾನ ಸಭಾ ಕ್ಷೇತ್ರ ಅಧ್ಯಕ್ಷ ಅಬೂಬಕ್ಕರ್ ಸಿದ್ದೀಕ್ ಕೆ.ಎ., ಸುಳ್ಯ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ರಝಾಕ್ ಕೆನರಾ, ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಮುಸ್ತಾಫ ಮುಸ್ಲಿಯಾರ್ ಉಪಸ್ಥಿತರಿದ್ದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ತಲಪಾಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.