ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಂಶೋಧನೆ- ರೈತರಿಗೆ ಪರಿಹಾರಕ್ಕೆ ಕೇಂದ್ರದಿಂದ ಅನುದಾನದ ಭರವಸೆ

0

ಪುತ್ತೂರು:ಕರಾವಳಿ ಪ್ರದೇಶ ಸೇರಿದಂತೆ ರಾಜ್ಯದಲ್ಲಿ ಅಡಿಕೆ ಬೆಳೆಗೆ ತಗುಲಿರುವ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಅಗತ್ಯ ಸಂಶೋಧನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭರವಸೆ ನೀಡಿದ್ದಾರೆ.ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಂಶೋಧನೆ ಜೊತೆಗೆ ಬಾಧಿತ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಒತ್ತಾಯಿಸಿದ್ದಾರೆ.


ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ಕಾಂಗ್ರೆಸ್ ಸದಸ್ಯ ಭೀಮಣ್ಣ ಟಿ.ನಾಯಕ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು,ಈಗಾಗಲೇ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಂಶೋಧನೆ ಕ್ರಮ ವಹಿಸಲಾಗಿದೆ.ಅಲ್ಲದೆ,ಇದರಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಪರಿಹಾರ ನೀಡಲು ಕೇಂದ್ರ ಸರಕಾರ 225 ಕೋಟಿ ರೂ.ಒದಗಿಸುವ ಭರವಸೆ ನೀಡಿದೆ.ಹೀಗಾಗಿ ರೈತರು ಆತಂಕಪಡುವ ಅಗತ್ಯವಿಲ್ಲ ಎಂದರು.


ವಿಷಯ ಪ್ರಸ್ತಾಪಿಸಿದ ಭೀಮಣ್ಣ ನಾಯಕ್, ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸೂಕ್ತ ಸಂಶೋಧನೆ ನಡೆಸಬೇಕು.ರೈತರಿಗೆ ಅಗತ್ಯ ಪರಿಹಾರ ನೀಡಬೇಕು ಎಂದರು.ಇದಕ್ಕೆ ಧ್ವನಿಗೂಡಿಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಕಾಂಗ್ರೆಸ್‌ನ ರಾಜೇಗೌಡ ಅವರು, ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಸಂಬಂಧ ಸಂಶೋಧನೆಯ ಜತೆಗೆ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.ಈ ಕುರಿತು ಪರಿಶೀಲಿಸಲಾಗುವುದು ಎಂದು ಸಚಿವ ಮಲ್ಲಿಕಾರ್ಜುನ್ ತಿಳಿಸಿದರು.ಅಡಿಕೆ ಎಲೆಚುಕ್ಕೆ ರೋಗದಿಂದ ಪುತ್ತೂರು,ಸುಳ್ಯ,ಕಡಬ ಸೇರಿದಂತೆ ಹಲವು ಕಡೆಗಳಲ್ಲಿ ಈಗಾಗಲೇ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.

LEAVE A REPLY

Please enter your comment!
Please enter your name here