ಕಾಂಗ್ರೆಸ್ ಎದುರು ಸ್ಪರ್ಧೆ ಮಾಡುವುದಕ್ಕೂ ಹಿಂದೇಟು ಹಾಕುವ ಪರಿಸ್ಥಿತಿ ಬಿಜೆಪಿಗೆ ಬಂದೊದಗಿದೆ-ಕೃಷ್ಣಪ್ರಸಾದ್ ಆಳ್ವ

0

ಪುತ್ತೂರು: ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಎಲ್ಲಾ 12 ಮಂದಿ ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷದ ಜನಪರವಾದ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ ತಿಳಿಸಿದ್ದಾರೆ.

ಮುಂಡೂರು ಸಿಎ ಬ್ಯಾಂಕ್ ಸಭಾಂಗಣದಲ್ಲಿ ಅವಿರೋಧವಾಗಿ ಆಯ್ಕೆಯಾದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಅಭಿನಂದಿಸಿ ಮಾತನಾಡಿದ ಅವರು ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ತಳಮಟ್ಟದಲ್ಲೂ ಭಾರೀ ಪರಿಣಾಮ ಬೀರಿದ್ದು ಬಿಜೆಪಿಯವರು ಕಾಂಗ್ರೆಸ್ ಮುಂದೆ ಸ್ಪರ್ಧೆ ಮಾಡುವುದಕ್ಕೂ ಹಿಂದೇಟು ಹಾಕುವ ಪರಿಸ್ಥಿತಿ ಬಂದೊದಗಿದೆ ಎಂದು ಹೇಳಿದರು. ಶಾಸಕ ಅಶೋಕ್ ಕುಮಾರ್ ರೈ ಅವರ ಅಭಿವೃದ್ಧಿ ಕಾರ್ಯಗಳು, ಮುಂಡೂರು ಪ್ರಾ.ಕೃ.ಪ.ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ ಮತ್ತು ತಂಡದ ಕಾರ್ಯವೈಖರಿ ಇವೆಲ್ಲವೂ ಇಂದು ಕಾಂಗ್ರೆಸ್ ಬೆಂಬಲಿತರ ಅವಿರೋಧ ಆಯ್ಕೆಗೆ ಕಾರಣವಾಗಿದೆ. ಇತ್ತೀಚೆಗೆ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುಣಾವಣೆಯಲ್ಲಿ ಸೋಲು ಕಂಡಿರುವ ಬಿಜೆಪಿ ಎಲ್ಲಾ ಕಡೆ ಸೋಲುತ್ತಲೇ ಇದೆ, ಜನತೆ ಪೊಳ್ಳು ಭರವಸೆ ನೀಡುವ ಬಿಜೆಪಿಯನ್ನು ತಿರಸ್ಕರಿಸಿ ನುಡಿದಂತೆ ನಡೆಯುವ ಕಾಂಗ್ರೆಸ್‌ನ್ನು ಬೆಂಬಲಿಸುತ್ತಿದ್ದಾರೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ, ಉಪಾಧ್ಯಕ್ಷ ಯಾಕೂಬ್ ಮುಲಾರ್ ಹಾಗೂ ನಿರ್ದೇಶಕರು, ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here