ಕಡಬ: ಪುಣ್ಯ ಕ್ಷೇತ್ರದ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಮಹೋತ್ಸವದ ಅಂಗವಾಗಿ ಷಷ್ಠಿಯ ದಿನವಾದ ಆದಿತ್ಯವಾರ ಶ್ರೀ ದೇವಳದಲ್ಲಿ 50 ಭಕ್ತರು ಎಡೆಸ್ನಾನ ಸೇವೆ ನೆರವೇರಿಸಿದರು. 33 ಪುರುಷರು ಮತ್ತು 17 ಮಹಿಳೆಯರು ಸೇವೆ ಮಾಡಿದರು.
ಗೋವು ಸೇವಿಸಿದ ಎಲೆಯ ಮೇಲೆ ಭಕ್ತರು ಉರುಳು ಸೇವೆ ನಡೆಸುವ ಮೂಲಕ ಕಿರುಷಷ್ಠಿ ಜಾತ್ರೋತ್ಸವದ ಷಷ್ಠಿಯ ದಿನದಂದು ಎಡೆಸ್ನಾನ ಹರಕೆ ಸೇವೆ ಸಲ್ಲಿಸಿದರು.
ನೆರವೇರಿದ ಎಡೆಸ್ನಾನ:
ಧಾರ್ಮಿಕ ದತ್ತಿ ಇಲಾಖೆಯ ಶೈವಾಗಮ ಪಂಡಿತರಾಜಗೋಪಾಲ್ ಅವರ ಮಾರ್ಗದರ್ಶನದಂತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಧ್ಯಾಹ್ನ ಮಹಾಪೂಜೆ ಬಳಿಕ ದೇವಳದ ಹೊರಾಂಗಣದ ಸುತ್ತಲೂ 432 ಬಾಳೆ ಎಲೆಗಳನ್ನು ಹಾಕಿ ಅದರ ಮೇಲೆ ದೇವರ ನೈವೇಧ್ಯಗಳನ್ನು ಹಾಕಲಾಯಿತು. ಬಳಿಕ ದೇವಳದ ಗೋವುಗಳು ಆ ಎಲೆಗಳಲ್ಲಿದ್ದ ಅನ್ನಪ್ರಸಾದವನ್ನು ತಿಂದವು. ಹಸುಗಳು ತಿಂದ ಅನ್ನಪ್ರಸಾದದ ಮೇಲೆ ದೇವಳದ ಎದುರಿನ ದರ್ಪಣತೀರ್ಥ ನದಿಯಲ್ಲಿ ಸ್ನಾನ ಮಾಡಿ ನಿಂತಿದ್ದ ಎಲ್ಲಾ ವಯೋಮಾನದ ಭಕ್ತರು ಸ್ವಯಂಪ್ರೇರಿತರಾಗಿ ಉರುಳು ಸೇವೆ ಕೈಗೊಂಡರು. ಗೋವು ತಿಂದ ಎಲೆಯ ಮೇಲೆ ಉರುಳು ಸೇವೆ ಮಾಡುತ್ತಾ ಒಂದು ಸುತ್ತು ಪ್ರದಕ್ಷಿಣೆ ಹಾಕಿದ ಬಳಿಕ ಭಕ್ತರು ದರ್ಪಣ ತೀರ್ಥ ನದಿಯಲ್ಲಿ ಸ್ನಾನ ಮಾಡಿ ಶ್ರೀ ದೇವರ ಪ್ರಸಾದ ಮತ್ತು ಪ್ರಸಾದ ಬೋಜನ ಸ್ವೀಕರಿಸಿದರು.
ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಸೇರಿದಂತೆ ದೇವಳದ ಸಿಬ್ಬಂಧಿಗಳು ಭಕ್ತರು ಉಪಸ್ಥಿತರಿದ್ದರು.