ಶ್ರೀ ಕ್ಷೇತ್ರ ಧರ್ಮಸ್ಥಳ,ಧರ್ಮಾಧಿಕಾರಿಗಳ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ, ಅನುಯಾಯಿಗಳಿಗೆ ಹೈಕೋರ್ಟ್ ಆದೇಶ

0

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ಡಾ|ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಯಾವುದೇ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಅನುಯಾಯಿಗಳಿಗೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ.

ನ್ಯಾ|ಆರ್.ದೇವದಾಸ್ ಅವರಿದ್ದ ಏಕ ಸದಸ್ಯ ಪೀಠ ಜ.೨೦ರಂದು ಈ ಮಹತ್ವದ ಆದೇಶ ನೀಡಿದ್ದು, ಸಾರ್ವಜನಿಕ ಸಭೆಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಡಾ|ಡಿ.ವೀರೇಂದ್ರ ಹೆಗ್ಗಡೆ, ಅವರ ಕುಟುಂಬ, ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಯಾವುದೇ ಅಪಪ್ರಚಾರ ಅಥವಾ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ನ್ಯಾಯಪೀಠ ಆದೇಶಿಸಿದೆ.

ಸಿವಿಲ್ ನ್ಯಾಯಾಲಯದ ತಡೆಯಾಜ್ಞೆ ಇದ್ದರೂ, ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಇತರರು ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಅಪಪ್ರಚಾರ, ಮಾನಹಾನಿ ಮಾಡಿರುವುದಲ್ಲದೇ, ನ್ಯಾಯಾಂಗ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳ ನಿಂದನೆ ಮಾಡಿದ್ದಾರೆನ್ನುವುದನ್ನು ಪರಿಗಣಿಸಿ ಹೈಕೋರ್ಟ್ ಈ ಆದೇಶ ನೀಡಿದೆ.

ಅರ್ಜಿಯ ವಿಚಾರಣೆ ವೇಳೆ, ಮಹೇಶ್ ಶೆಟ್ಟಿ ತಿಮರೋಡಿ ಬೇಷರತ್ ಕ್ಷಮೆಯ ಅಫಿಡವಿಟ್ ಸಲ್ಲಿಸಿದ್ದರೂ, ತಮ್ಮ ವರ್ತನೆಯನ್ನು ಸರಿಪಡಿಸಿಕೊಂಡಿಲ್ಲ,ಮುಂದಿನ ದಿನಗಳಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಸಹಚರರು ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ, ಸಭೆ ಸಮಾರಂಭಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಕುಟುಂಬ ಸದಸ್ಯರು ಹಾಗೂ ಧರ್ಮಸ್ಥಳದ ಸಂಸ್ಥೆಗಳ ವಿರುದ್ಧ ಮಾನಹಾನಿ ಹೇಳಿಕೆ ನೀಡಿ ಅಪಪ್ರಚಾರ, ನ್ಯಾಯಾಂಗ ನಿಂದನೆ ಮಾಡಿದಲ್ಲಿ ಕಾನೂನು ರೀತಿಯಲ್ಲಿ ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ನ್ಯಾಯಪೀಠ ಪೋಲೀಸರಿಗೆ ಖಡಕ್ ಆದೇಶ ನೀಡಿದೆ.ಅರ್ಜಿದಾರರ ಪರ ಹೈಕೋರ್ಟ್ ಹಿರಿಯ ನ್ಯಾಯವಾದಿ ಉದಯ ಹೊಳ್ಳ ಹಾಗೂ ಎಸ್.ರಾಜಶೇಖರ್ ಹಿಲಿಯಾರು ವಾದ ಮಂಡಿಸಿದ್ದರು.

LEAVE A REPLY

Please enter your comment!
Please enter your name here