ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಾದರಿ ಸಹಕಾರಿ ನಾಯಕರಾಗಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಡಾ.ಎಂ.ಎನ್.ರಾಜೇಂದ್ರ ಕುಮಾರ್ 76ನೇ ಹುಟ್ಟುಹಬ್ಬದ ಸಂಭ್ರಮಾಚರಣೆ ನಡೆಸಲು ಅವಿಭಜಿತ ಜಿಲ್ಲೆಯ ಸಮಸ್ತ ಸಹಕಾರಿಗಳು ನಿರ್ಧರಿಸಿದ್ದಾರೆ.
ಫೆ.24ರಂದು ಬೆಳಗ್ಗೆ 10.30ಕ್ಕೆ ನಗರದ ಎಸ್ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ 76ನೇ ಹುಟ್ಟುಹಬ್ಬದ ಸಂಭ್ರಮ, ಅಭಿವಂದನಾ ಕಾರ್ಯಕ್ರಮ ಹಾಗೂ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣಾ ಸಮಾರಂಭ ನಡೆಯಲಿದೆ ಎಂದು ಡಾ.ಎಂ.ಎನ್.ಆರ್.ಅಭಿವಂದನಾ ಸಮಿತಿ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಹಕಾರ ಕ್ಷೇತ್ರವನ್ನು ಸದೃಢಗೊಳಿಸುವ ಚಿಂತನೆಯೊಂದಿಗೆ ಜಿಲ್ಲೆಯಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಿರುವ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಹಕಾರಿಗಳೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ 76 ಮಂದಿ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಗುವುದು. ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಿಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷ ಎನ್.ವಿನಯ್ ಹೆಗ್ಡೆ ಅವರು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಅಭಿವಂದಿಸಲಿದ್ದಾರೆ. ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿವಂದನಾ ಭಾಷಣ ಮಾಡಲಿದ್ದಾರೆ. 76 ಮಂದಿ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆಯನ್ನು ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ನೆರವೇರಿಸಲಿದ್ದಾರೆ. ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಡಾ.ಎಂಎನ್ಆರ್ ಅಭಿವಂದನಾ ಸಮಿತಿ ಕಾರ್ಯಾಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಪ್ರಧಾನ ಕಾರ್ಯದರ್ಶಿ ಭಾಸ್ಕರ ಎಸ್.ಕೋಟ್ಯಾನ್, ಜೈರಾಜ್ ಬಿ.ರೈ, ಜಯಕರ ಶೆಟ್ಟಿ ಇಂದ್ರಾಳಿ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.