ಪುತ್ತೂರು: ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಹಾಗೂ ಕಾರಣಿಕ ಕ್ಷೇತ್ರ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ಹಾಗೂ ಸತ್ಯನಾರಾಯಣ ಪೂಜೆ, ಪರಿವಾರ ದೈವಗಳ ನೇಮೋತ್ಸವ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.22 ಮತ್ತು ಫೆ 23 ರಂದು ನಡೆಯಲಿದೆ.
ಫೆ.21ರಂದು ಹಸಿರುವಾಣಿ ಸಮರ್ಪಣೆ ನಡೆಯಲಿದೆ.
ಫೆ.22ರಂದು ಬೆಳಿಗ್ಗೆ ಭಜನಾ ಕಾರ್ಯಕ್ರಮ,ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಕಲಶ ಪೂಜೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಬಳಿಕ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ದೈವಗಳ ಭಂಡಾರ ತೆಗೆದ ಬಳಿಕ ವಲ್ಮೀಕ ರೂಪಿ ಸುಬ್ರಹ್ಮಣ್ಯ ದೇವರಿಗೆ ರಂಗಪೂಜೆ ನಡೆದು ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ,ವೈದಿಕ ಮಂತ್ರಾಕ್ಷತೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.
ರಾತ್ರಿ 9ಕ್ಕೆ ಶ್ರೀ ಕ್ಷೇತ್ರದ ಬ್ರಹ್ಮಕಲಶೋತ್ಸವದ ಸವಿನೆನಪುಗಳ ಸ್ಮರಣ ಸಂಚಿಕೆ ವಲ್ಮಿಕ 2024 ಬಿಡುಗಡೆ ನಡೆಯಲಿದೆ.ಬ್ರಹ್ಮ ಕಲಶೋತ್ಸವ ಸಮಿತಿ ಗೌರವಾಧ್ಯಕ್ಷರಾದ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು.ಸ್ಮರಣ ಸಂಚಿಕೆಯ ಪ್ರಧಾನ ಸಂಪಾದಕರಾದ ನಾರಾಯಣ ರೈ ಕುಕ್ಕುವಳ್ಳಿ,ಆಡಳಿತ ಮೊಕ್ತೇಸರರಾದ ಸಂತೋಷ್ ಕುಮಾರ್ ರೈ ನಳೀಲು ಉಪಸ್ಥಿತರಿರುವರು.
ರಾತ್ರಿ 9.30ರಿಂದ ಅಭಿನಯ ಕಲಾವಿದರು ಉಡುಪಿ ಇವರಿಂದ ತುಳು ನಾಟಕ ಶಾಂಭವಿ ಪ್ರದರ್ಶನಗೊಳ್ಳಲಿದೆ. ಫೆ.23ರಂದು ಪ್ರಾತಃಕಾಲ ವ್ಯಾಘ್ರ ಚಾಮುಂಡಿಯ ನೇಮೋತ್ಸವ, ಬೆಳಿಗ್ಗೆ ರುದ್ರ ಚಾಮುಂಡಿಯ ನೇಮೋತ್ಸವ ಗುಳಿಗ ದೈವಕ್ಕೆ ತಂಬಿಲ ಸೇವೆ ನಡೆಯಲಿದೆ ಎಂದು ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.