ಅಧ್ಯಕ್ಷರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟು, ಉಪಾಧ್ಯಕ್ಷರಾಗಿ ಹರೀಶ್ ಗೌಡ ಗುಮ್ಮಟೆಗದ್ದೆ ಅವಿರೋಧ ಆಯ್ಕೆ
ಪುತ್ತೂರು: ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಶಶಿಕುಮಾರ್ ರೈ ಬಾಲ್ಯೊಟ್ಟು ರವರು ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಉಪಾಧ್ಯಕ್ಷರಾಗಿ ಹರೀಶ್ ಗೌಡ ಗುಮ್ಮಟೆಗದ್ದೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ 12 ಸ್ಥಾನಗಳಿಗೂ ಇತ್ತೀಚೆಗೆ ಅವಿರೋಧ ಆಯ್ಕೆ ನಡೆದಿತ್ತು. ಆದರೆ ಆಡಳಿತ ಮಂಡಳಿಯ ಅಧ್ಯಕ್ಷರ ಸ್ಥಾನಕ್ಕೆ ಇಬ್ಬರು ಪ್ರಬಲ ಆಕಾಂಕ್ಷಿಗಳಾಗಿದ್ದರು. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಹಾಗೂ ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಮತ್ತು ಸಂಘದ ಮಾಜಿ ಅಧ್ಯಕ್ಷ ಕೊಮ್ಮಂಡ ಜಗನ್ನಾಥ ಶೆಟ್ಟಿ ರವರ ಮಧ್ಯೆ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆದಿತ್ತು. ಬಳಿಕ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಮುಖಂಡರು ಮಾತುಕತೆ ನಡೆಸಿದರೂ ಒಮ್ಮತ ಮೂಡದ ಕಾರಣ ಪ್ರಥಮ ಬಾರಿಗೆ ನಿರ್ದೇಶಕರಾಗಿ ಆಯ್ಕೆಗೊಂಡ ದಿವಾಕರ ಬಲ್ಲಾಳ್ ರವರನ್ನು ಅಧ್ಯಕ್ಷರನ್ನಾಗಿ ಘೋಷಣೆ ಮಾಡಿದರು. ಇದಕ್ಕೆ ಸಹಮತ ಸೂಚಿಸದೆ ಬಳಿಕ ಚುನಾವಣೆ ನಡೆಯಿತು.

ಚುನಾವಣೆಯಲ್ಲಿ ಶಶಿಕುಮಾರ್ ರೈ ಬಾಲ್ಯೊಟ್ಟು 9 ಮತ ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರು. ದಿವಾಕರ ಬಲ್ಲಾಳ್ 4 ಮತ ಪಡೆದುಕೊಂಡರು.
ಸಹಕಾರ ಸಂಘಗಳ ಸಹಾಯಕ ನಿಬಂಧಕ ಕಛೇರಿಯ ಮಾರಾಟಾಧಿಕಾರಿ ಶೋಭಾ ಎನ್.ಎಸ್. ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಮಯ್ಯ ರೈ ಪಿ. ಸ್ವಾಗತಿಸಿ, ಎಸ್‌ಡಿಸಿಸಿ ಬ್ಯಾಂಕ್ ವಲಯ ಮೇಲ್ವಿಚಾರಕ ವಸಂತ್ ವಂದಿಸಿದರು.