ಮಂಗಳೂರು:ಮಂಗಳೂರು-ಕಬಕ ಪ್ಯಾಸೆಂಜರ್ ರೈಲು ಸೇವೆಯನ್ನು ಸುಬ್ರಹ್ಮಣ್ಯಕ್ಕೆ ವಿಸ್ತರಿಸಲು ಕೇಂದ್ರ ರೈಲ್ವೆ ಮಂಡಳಿ ಅನುಮೋದನೆ ನೀಡಿದ್ದು ಈ ಮೂಲಕ ದಶಕಗಳ ಬೇಡಿಕೆ ಈಡೇರಿದಂತಾಗಿದೆ ಎಂದು ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಹೊಸ ವೇಳಾಪಟ್ಟಿ ಪ್ರಕಾರ ಮಂಗಳೂರು ಸೆಂಟ್ರಲ್-ಕಬಕ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು (56625) ಮುಂಜಾನೆ 4 ಗಂಟೆಗೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಕಬಕ-ಪುತ್ತೂರಿಗೆ 5.18ಕ್ಕೆ ತಲುಪಲಿದೆ.ಅಲ್ಲಿ 2 ನಿಮಿಷ ನಿಲುಗಡೆಯಾಗಿ ಬೆಳಿಗ್ಗೆ 6.30ಕ್ಕೆ ಸುಬ್ರಹ್ಮಣ್ಯ ರಸ್ತೆಗೆ ತಲುಪಲಿದೆ. ಅದೇ ರೀತಿ ಸುಬ್ರಹ್ಮಣ್ಯ- ಮಂಗಳೂರು(56626) ಪ್ಯಾಸೆಂಜರ್ ರೈಲು ಬೆಳಿಗ್ಗೆ 7ಕ್ಕೆ ಸುಬ್ರಹ್ಮಣ್ಯ ರಸ್ತೆಯಿಂದ ಹೊರಟು 7.48ಕ್ಕೆ ಕಬಕ- ಪುತ್ತೂರು ತಲುಪಲಿದೆ.ಅಲ್ಲಿ 2 ನಿಮಿಷ ನಿಲುಗಡೆಯಾಗಿ 9.30ಕ್ಕೆ ಮಂಗಳೂರು ಸೆಂಟ್ರಲ್‌ಗೆ ತಲುಪಲಿದೆ.
ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು (56627) ಸಂಜೆ 5.45ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಸಂಜೆ 7.03ಕ್ಕೆ ಪುತ್ತೂರಿಗೆ ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ ರಾತ್ರಿ 8.10ಕ್ಕೆ ಸುಬ್ರಹ್ಮಣ್ಯ ರಸ್ತೆಗೆ ತಲುಪಲಿದೆ. ಸುಬ್ರಹ್ಮಣ್ಯ ರಸ್ತೆ- ಮಂಗಳೂರು ಪ್ಯಾಸೆಂಜರ್ ರೈಲು (56628) ರಾತ್ರಿ 8.40ಕ್ಕೆ ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಿಂದ ಹೊರಟು ರಾತ್ರಿ 9.28ಕ್ಕೆ ಕಬಕ- ಪುತ್ತೂರಿಗೆ ತಲುಪಿ, ರಾತ್ರಿ 11.10ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ. ನೈಋತ್ಯ ರೈಲ್ವೆ ಹಾಗೂ ದಕ್ಷಿಣ ರೈಲ್ವೆಯು ಅನುಕೂಲತೆ ಪರಿಶೀಲಿಸಿ ಆದಷ್ಟು ಬೇಗ ಈ ರೈಲು ವಿಸ್ತರಣೆ ಸೇವೆ ಆರಂಭಿಸುವಂತೆ ರೈಲ್ವೆ ಮಂಡಳಿಯು ಆದೇಶದಲ್ಲಿ ಸೂಚಿಸಿದೆ ಎಂದು ಅವರು ಹೇಳಿದ್ದಾರೆ.