ವೃತ್ತಿಯಲ್ಲಿ ಎಷ್ಟೇ ಎತ್ತರಕ್ಕೆ ಹೋದರೂ ದೇಶದ ಬಗ್ಗೆ ಗೌರವವಿರಲಿ: ಮಿತ್ರಂಪಾಡಿ ಜಯರಾಮ್ ರೈ
ಪುತ್ತೂರು: ನೆಹರೂ ನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಲೀಗೋ-ನೆಟ್ (L’e_go’-net)- ಕಂಪ್ಯೂಟರ್ ಲ್ಯಾಬ್ ಹಾಗೂ ‘ಇ- ಲೈಬ್ರೆರಿ’ಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಈ ಉದ್ಘಾಟನಾ ಕಾರ್ಯಕ್ರಮವನ್ನು ಅಬುದಾಬಿಯ ಭಾರತೀಯ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷರಾದ ಮಿತ್ರಂಪಾಡಿ ಜಯರಾಮ್ ರೈ ಯವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ಡಿಜಿಟಲ್ ಯುಗದಲ್ಲಿ ಜಗತ್ತು ಪ್ರತಿಕ್ಷಣ ಬದಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರವು ಅದಕ್ಕೆ ಪೂರಕವಾಗಿ ರೂಪುಗೊಂಡಿದ್ದು, ಅದಕ್ಕಾಗಿ ಶಿಕ್ಷಣ ಸಂಸ್ಥೆಗಳು ಸಹಾ ಹೊಸ ವಿನ್ಯಾಸದಲ್ಲಿ ಶಿಕ್ಷಣ ನೀಡುವ ಕಾರ್ಯವನ್ನು ಮಾಡುತ್ತಿದೆ. ಈ ನಿಟ್ಟಿನಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯವು ಇಲ್ಲಿನ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ತರಬೇತಿ ನೀಡುವ ಉದ್ದೇಶದಿಂದ ಅತ್ಯುತ್ತಮವಾದ ಕಂಪ್ಯೂಟರ್ ಲ್ಯಾಬ್ ಹಾಗೂ ‘ಇ- ಲೈಬ್ರೆರಿ’ಯನ್ನು ಸ್ಥಾಪಿಸಿರುವುದು ಅತ್ಯಂತ ಸಂತೋಷದ ವಿಷಯವಾಗಿದೆ ಎಂದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯವು ನೀಡುತ್ತಿರುವ ಈ ಎಲ್ಲಾ ಸವಲತ್ತುಗಳನ್ನು ವಿದ್ಯಾರ್ಥಿಗಳು ತಮ್ಮ ಭವಿಷ್ಯ ನಿರ್ಮಾಣಕ್ಕಾಗಿ ಸಮರ್ಥವಾಗಿ ಉಪಯೋಗಿಸಿಕೊಳ್ಳಬೇಕು. ಆ ಮೂಲಕ ಸಂಸ್ಥೆಯ ಆಶಯವನ್ನು ಈಡೇರಿಸಿ, ಸಮಾಜದಲ್ಲಿ ಅತ್ಯುನ್ನತ ಸ್ಥಾನವನ್ನು ಪಡೆಯಿರಿ. ಜೊತೆಗೆ ಕಾನೂನು ವೃತ್ತಿಯಲ್ಲಿ ಅತ್ಯಂತ ಎತ್ತರದ ಸ್ಥಾನಕ್ಕೆ ಹೋಗುವ ನೀವು, ಬರೇ ಹಣ, ಗೌರವದ ಹಿಂದೆ ಹೋಗದೇ, ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸಿಕೊಂಡು, ಎಂದಿಗೂ ಹೆತ್ತ ತಾಯಿ, ಹೊತ್ತ ಭೂಮಿ ಹಾಗೂ ವಿದ್ಯೆ ನೀಡಿದ ಗುರುಗಳು ಹಾಗೂ ವಿದ್ಯಾಸಂಸ್ಥೆಯನ್ನು ಮರೆಯಬಾರದು. ವೃತ್ತಿಯಲ್ಲಿ ಎಷ್ಟೇ ದೊಡ್ಡ ಸಾಧನೆ ಮಾಡಿದರೂ, ತನ್ನ ತಾಯಿ, ದೇಶ, ಗುರು ಹಾಗೂ ವಿದ್ಯಾಸಂಸ್ಥೆಯನ್ನು ಗೌರವದಿಂದ ಕಾಣುವ ಮನೋಭಾವ ನಿಮ್ಮದಾಗಲಿ ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಡಾ. ಕೆ. ಎಂ. ಕೃಷ್ಣ ಭಟ್ ಮಾತನಾಡಿ, ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ನಡೆಸುವ ಶಿಕ್ಷಣ ಸಂಸ್ಥೆಗಳು ಸದಾ ವಿದ್ಯಾರ್ಥಿಸ್ನೇಹಿಗಳಾಗಿ ರೂಪುಗೊಂಡಿದ್ದು, ಅವರ ಭವಿಷ್ಯಕ್ಕೆ ಪೂರಕವಾದ ವಾತಾವರಣವನ್ನು ತಮ್ಮ ಸಂಸ್ಥೆಗಳಲ್ಲಿ ಒದಗಿಸುವ ಕೆಲಸ ಮಾಡುತ್ತಿವೆ. ಈ ನಿಟ್ಟಿನಲ್ಲಿ ಕಾನೂನು ಶಿಕ್ಷಣ ಪಡೆಯುವುದರ ಜೊತೆಗೆ ಆಧುನಿಕ ಅವಶ್ಯಕತೆಗಳಾದ ಕಂಪ್ಯೂಟರ್ ಜ್ಞಾನ ಹಾಗೂ ಇನ್ನಿತರ ಕೌಶಲ್ಯಗಳನ್ನು ಗಳಿಸುವುದು ಅತ್ಯಂತ ಪ್ರಮುಖವಾಗಿದೆ ಎಂಬುದನ್ನು ಅರಿತಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯವು ಅದಕ್ಕಾಗಿ ಇಂದು ಸುಸಜ್ಜಿತವಾದ ಕಂಪ್ಯೂಟರ್ ಲ್ಯಾಬ್ ಹಾಗೂ ಇ-ಲೈಬ್ರೆರಿಯನ್ನು ಸ್ಥಾಪಿಸಿದೆ. ಜೊತೆಗೆ ಕಾನೂನು ಅಭ್ಯಾಸ ಮಾಡುವ ತನ್ನ ವಿದ್ಯಾರ್ಥಿಗಳಿಗೆ ಉಚಿತವಾಗಿ ಕಂಪ್ಯೂಟರ್ ತರಬೇತಿಯನ್ನು ನೀಡುತ್ತಿರುವುದು ಅತ್ಯಂತ ಸಂತೋಷದ ವಿಷಯವಾಗಿದೆ ಎಂದರು. ಇದರ ಸದವಕಾಶವನ್ನು ಕಾನೂನು ವಿದ್ಯಾರ್ಥಿಗಳು ತಮ್ಮ ಅಧ್ಯಯನಕ್ಕೆ ಪೂರಕವಾಗಿ ಪಡೆದುಕೊಳ್ಳುವಂತೆ ಕರೆ ನೀಡಿದರು.


ವೇದಿಕೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ಸುರೇಂದ್ರ ಕಿಣಿ ಜಿ., ಸಂಚಾಲಕರಾದ ವಿಜಯನಾರಾಯಣ ಕೆ.ಎಂ., ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಬಿ.ಕೆ. ರವೀಂದ್ರ, ಪ್ರಾಂಶುಪಾಲರಾದ ಅಕ್ಷತಾ ಎ.ಪಿ. ಉಪಸ್ಥಿತರಿದ್ದರು. ಕಾನೂನು ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀರಕ್ಷಾ ಸ್ವಾಗತಿಸಿ, ಸಂಗೀತ ಎಸ್. ಎಂ. ವಂದಿಸಿದರು. ಕಾನೂನು ವಿದ್ಯಾರ್ಥಿನಿ ಸ್ಫೂರ್ತಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರು, ಮಹಾವಿದ್ಯಾಲಯದ ಬೋಧಕ- ಬೋಧಕೇತರ ಸಿಬ್ಬಂದಿ ಹಾಗೂ ಕಾನೂನು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
