ಪುತ್ತೂರು: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವವನ್ನು ಮೂಡಿಸುವುದರ ಜೊತೆಗೆ ಆಂಗ್ಲ ಭಾಷೆಯಲ್ಲಿ ಸಂಪೂರ್ಣವಾದ ಹಿಡಿತವನ್ನು ಸಾಧಿಸುವಂತೆ ಮಾಡುವುದು ಅತಿ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಶಾಲೆಯಲ್ಲಿ ಇಂತಹ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯ ಎಂದು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರಮೇಶ ಗೌಡ ಪಜಿಮಣ್ಣು ತಿಳಿಸಿದರು. ಅವರು ಮುಂಡೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ ಇಂಗ್ಲೀಷ್ ಫೆಸ್ಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಿಕ್ಷಣ ಸಂಯೋಜಕಿ ಅಮೃತ ಕಲಾ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಪಜಿಮಣ್ಣು ಶ್ರೀನಿವಾಸ ರಾವ್ ಕಾವೇರಮ್ಮ ಮೆಮೋರಿಯಲ್ ಟ್ರಸ್ಟ್ ಇದರ ಅಧ್ಯಕ್ಷ ಎಂ ಪಿ ಬಾಲಕೃಷ್ಣ ಹಾಗೂ ಸದಸ್ಯ ಉದಯಕುಮಾರ ಅವರು ಟ್ರಸ್ಟಿನ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆಯನ್ನು ಮಾಡಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಸ್ತಾಂತರಿಸಿ, ಸಂದರ್ಭೋಚಿತವಾಗಿ ಮಾತುಗಳನ್ನಾಡಿ ಶುಭ ಹಾರೈಸಿದರು. ವಿಜ್ಞಾನ ಹಾಗೂ ಇಂಗ್ಲಿಷ್ ದಿನದ ಪ್ರಯುಕ್ತ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಟ್ರಸ್ಟಿನ ಸ್ಥಾಪಕ ಅಧ್ಯಕ್ಷರಾಗಿದ್ದು ಇತ್ತೀಚೆಗೆ ನಿಧನರಾದ ಮುಂಡೂರು ಎಂ.ಪಿ ಜಯರಾಮ ಇವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಅವರು ಈ ಮೊದಲೇ ಶಾಲಾ ವಿದ್ಯಾರ್ಥಿಗಳಿಗೆ ನೀಡಲು ತಿಳಿಸಿದ್ದ ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಲಾಯಿತು.
ಶಾಲಾ ಮುಖ್ಯಗುರು ವಿಜಯ ಪಿ ಸ್ವಾಗತಿಸಿದರು. ಶಿಕ್ಷಕ ರಾಮಚಂದ್ರ ವಂದಿಸಿದರು. ಶಿಕ್ಷಕಿ ಮೂಕಾಂಬಿಕಾ ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು. ಶಿಕ್ಷಕ ಅಬ್ದುಲ್ ಬಶೀರ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ವೃಂದದವರು ಸಹಕರಿಸಿದರು.